ಮೈಸೂರು: ಅಯೋಧ್ಯೆಯಲ್ಲಿ ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಗರದ ಎಂ.ಜಿ.ರಸ್ತೆಯಲ್ಲಿರುವ ಕೋದಂಡರಾಮ ದೇವಸ್ಥಾನದ ಆವರಣದಲ್ಲಿ ಶ್ರೀರಾಮ ಸೇವಾ ಸಮಿತಿ ವತಿಯಿಂದ ಭಾನುವಾರ ಸ್ವಚ್ಛತಾ ಕಾರ್ಯ ನಡೆಯಿತು. ಬಿಜೆಪಿ ಸಂಸದ ಪ್ರತಾಪ್ ಸಿಂಹ, ಶಾಸಕ ಟಿ.ಎಸ್.ಶ್ರೀವತ್ಸ, ಮುಡಾ ಮಾಜಿ ಅಧ್ಯಕ್ಷ ಯಶಸ್ವಿ ಸೋಮಶೇಖರ್ ಸೇರಿದಂತೆ ಹಲವರು ಸ್ವಚ್ಛತಾ ಕಾರ್ಯದಲ್ಲಿ ನಿರತರಾದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, "ಜನವರಿ 22ರಂದು ರಾಮಜನ್ಮಭೂಮಿಯಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜ.14ನೇ ತಾರೀಖಿನಂದು ದೇಶದ ರಾಮಮಂದಿರಗಳು ಹಾಗೂ ದೇವಸ್ಥಾನಗಳ ಸ್ವಚ್ಛತಾ ಕಾರ್ಯ ನಡೆಸಬೇಕೆಂದು ಪ್ರಧಾನಿ ಮೋದಿ ಕರೆ ಕೊಟ್ಟಿದ್ದರು. ಅದಕ್ಕನುಗುಣವಾಗಿ ನಮ್ಮ ಕೃಷ್ಣರಾಜ ಕ್ಷೇತ್ರದ ಅಗ್ರಹಾರದ ಎಂ.ಜಿ.ರಸ್ತೆಯಲ್ಲಿ ಇರುವ ನಾಲ್ಕುನೂರು ವರ್ಷಗಳಷ್ಟು ಹಳೆಯ ಕೋದಂಡರಾಮ ದೇವಸ್ಥಾನವನ್ನು ಸ್ವಚ್ಛಗೊಳಿಸಬೇಕು ಎಂದು ಸ್ಥಳೀಯ ಶಾಸಕರು ಎಲ್ಲ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದರು. ನಾವೆಲ್ಲಾ ಇಲ್ಲಿ ಬಂದು ಸ್ವಚ್ಛತಾ ಕಾರ್ಯ ಕೈಗೊಂಡಿದ್ದೇವೆ. ಮುಂದಿನ ದಿನಗಳಲ್ಲಿ ದೇಗುಲದ ಅಭಿವೃದ್ಧಿಯನ್ನು ಶಾಸಕರ ನೇತೃತ್ವದಲ್ಲಿ ಕೈಗೊಳ್ಳುತ್ತೇವೆ" ಎಂದು ತಿಳಿಸಿದರು.