ಮೈಸೂರು:ಹಾಡಹಗಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹೇಶ್(27) ಕೊಲೆಯಾದ ವ್ಯಕ್ತಿ. ಗ್ರಾಮದ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಈ ದುರ್ಘಟನೆ ನಡೆದಿದೆ.
ಮಹೇಶ್ ಎಂಬಾತ ಆಟೋದಲ್ಲಿ ಕುಳಿತಿರುವುದನ್ನು ನೋಡಿದ ಗಿರೀಶ್ (32) ಎಂಬಾತ ಏಕಾಏಕಿ ಮಹೇಶ್ನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ತಲೆಗೆ ಬಲವಾಗಿ ಹೊಡೆದು ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಮಹೇಶನನ್ನು ಕಂಡ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಯಿತು. ಚಿಕಿತ್ಸೆ ಲಕಾರಿಯಾಗದೇ ಮಹೇಶ್ ಮೃತಪಟ್ಟಿದ್ದಾನೆ.
ಮಹೇಶ್ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಅದೇ ಗ್ರಾಮದಲ್ಲಿ ಆರೋಪಿ ಗಿರೀಶ್ ಕೂಡ ಕಟಿಂಗ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ತಕ್ಷಣ ಮಾಹಿತಿ ತಿಳಿದ ಹುಲ್ಲಹಳ್ಳಿ ಪೊಲೀಸರು ಹಾಗೂ ಡಿವೈಎಸ್ಪಿ ಗೋವಿಂದರಾಜು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಆರೋಪಿ ಗಿರೀಶ್ ಬಂಧನ:ಆರೋಪಿ ಗಿರೀಶ್ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ವೃತ ನಿರೀಕ್ಷಕ ಚಂದ್ರಶೇಖರ್, ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿ ಕಟ್ಟಿ ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.