ಮೈಸೂರು: ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯ ಉಪಯೋಗ ರೋಗಿಗಳಿಗೆ ತಲುಪಿಸುವಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆ ರಾಜ್ಯದಲ್ಲಿ ಮೊದಲ ಸ್ಥಾನಗಳಿಸಿದರೆ, ಮೈಸೂರಿನ ಕೆ.ಆರ್.ಆಸ್ಪತ್ರೆ ಎರಡನೇ ಸ್ಥಾನಗಳಿಸಿದ್ದು, ವೈದ್ಯರ ಕಾರ್ಯ ವೈಖರಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಎರಡನೇ ಸ್ಥಾನ ಪಡೆದ ಮೈಸೂರು ಕೆ.ಆರ್. ಆಸ್ಪತ್ರೆಯಲ್ಲಿ ಡಿಸೆಂಬರ್ ತಿಂಗಳನಲ್ಲಿ 1281ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಎರಡನೇ ಸ್ಥಾನ ಪಡೆದಿದೆ. ಸಾಮಾನ್ಯ ದ್ವಿತೀಯ ಹಂತ-665, ಕ್ಲಿಷ್ಟಕರ ದ್ವಿತೀಯ ಹಂತ-231, ತೃತೀಯ ಹಂತ-252, ತುರ್ತು-133, ಉಪಚಿಕಿತ್ಸೆ ವಿಧಾನ -10 ಸೇರಿದಂತೆ ಒಟ್ಟು 1281 ರೋಗಿಗಳು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಯೋಜನೆ ಅಡಿ ಸರ್ಕಾರಿ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾದರೆ, ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ.
ಕೃಷ್ಣರಾಜ ಆಸ್ಪತ್ರೆಯು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡಿದೆ ಎಂಬ ಹೆಗ್ಗಳಿಕೆ ಪಡೆದಿದೆ. ಬಿಪಿಎಲ್ ಪಡಿತರ ಕಾರ್ಡು ಹೊಂದಿರುವ ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ, ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡು ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇ.3 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಾಗಲಿದೆ. ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ 1.50 ಲಕ್ಷ ರೂ.ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಒದಗಿಸಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ.
ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ 1304, ಮೈಸೂರಿನ ಕೆ.ಆರ್.ಆಸ್ಪತ್ರೆ- 1271, ಹಾಸನ ಜಿಲ್ಲೆಯ ಶ್ರೀ ಚಾಮರಾಜೇಂದ್ರ-1222 ,ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ-1154, ಮಂಡ್ಯ ಜಿಲ್ಲೆಯ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ-723, ಚಾಮರಾಜನಗರ ಜಿಲ್ಲಾಸ್ಪತ್ರೆ-687, ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ-637, ಉತ್ತರಕನ್ನಡ-ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ-549, ಕೊಪ್ಪಳ-ಜಿಲ್ಲಾಸ್ಪತ್ರೆ-419, ಶಿವಮೊಗ್ಗ-ಮೆಗ್ಗಾನ್-ಬೋಧನಾ ಜಿಲ್ಲಾ ಆಸ್ಪತ್ರೆ-406, ಬೆಳಗಾವಿ-ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ-375, ಕೊಡಗು- ಮಡಿಕೇರಿ ಜಿಲ್ಲಾಸ್ಪತ್ರೆ-367, ಮೈಸೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ-340, ಬೆಂಗಳೂರು-ವಿಕ್ಟೋರಿಯಾ ಆಸ್ಪತ್ರೆ-338, ಮೈಸೂರು-ಚೆಲುವಾಂಬ ಆಸ್ಪತ್ರೆ-294, ಗದಗ-ಗದಗ ಜಿಲ್ಲಾಸ್ಪತ್ರೆ-293 ಬೆಂಗಳೂರು-ರಾಜೀವ್ ಗಾಂಧಿ ಎದೆ ರೋಗಗಳ ಸಂಸ್ಥೆ-251, ಬೆಂಗಳೂರು- ಮಿಂಟೋ ಕಣ್ಣಾಸ್ಪತ್ರೆ-224, ರಾಯಚೂರು-ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ-209 ರೋಗಿಗಳಿಗೆ ಚಿಕಿತ್ಸೆ ನೀಡಿವೆ.