ಮೈಸೂರು:ಕಳೆದ ಸೆಪ್ಟೆಂಬರ್ನಲ್ಲಿ ನಡೆದ ಕೆ-ಸೆಟ್ ಪರೀಕ್ಷೆಯ ಫಲಿತಾಂಶದ ಕುರಿತು ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಮಾಹಿತಿ ನೀಡಿದರು.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಮೈಸೂರು ವಿವಿ ನಡೆಸಿದ ಕೆ-ಸೆಟ್ ಪರೀಕ್ಷೆಯ ಫಲಿತಂಶ ಪ್ರಕಟವಾಗಿದ್ದು, ಈ ಬಾರಿ ಪುರುಷ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಸ್ ಆಗಿದ್ದಾರೆ ಎಂದರು.
ಪರೀಕ್ಷೆಯಲ್ಲಿ 5,495 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಅದರಲ್ಲಿ 3,113 ಪುರುಷ ವಿದ್ಯಾರ್ಥಿಗಳಿದ್ದರೆ, 2,382 ಮಹಿಳಾ ವಿದ್ಯಾರ್ಥಿಗಳಿದ್ದಾರೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಮತ್ತು ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿದ್ದಾರೆ.
ಪರೀಕ್ಷೆಗೆ ಸುಮಾರು 1,06,396 ಆಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 79,717 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಯುಜಿಸಿ ಮೈಸೂರು ವಿಶ್ವವಿದ್ಯಾನಿಲಯವನ್ನು ಪರೀಕ್ಷಾ ಕೇಂದ್ರವಾಗಿ ಆಯ್ಕೆ ಮಾಡಿತ್ತು ಎಂದರು.