ಮೈಸೂರು:ಕೈಗಾರಿಕೆಯೊಂದರಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ನಾಲ್ಕು ಗ್ರಾಮದ ಜನರು ಈ ಬಾರಿಯ ಗ್ರಾಪಂ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.
ನಾಲ್ಕು ಗ್ರಾಮಗಳಿಂದ ಗ್ರಾಪಂ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ನಂಜನಗೂಡು ತಾಲೂಕಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಏಷಿಯನ್ ಪೇಂಟ್ಸ್ ಕಾರ್ಖಾನೆ ಸ್ಥಳೀಯರಿಗೆ ಉದ್ಯೋಗ ನೀಡಲು ನಿರಾಕರಿಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹಿಮ್ಮಾವು, ಹಿಮ್ಮಾವುಹುಂಡಿ, ಬಕ್ಕಳ್ಳಿ, ಹುಳಿಮಾವು ಈ ನಾಲ್ಕು ಗ್ರಾಮಗಳ ಗ್ರಾಮಸ್ಥರು, ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
ಏಷಿಯನ್ ಪೇಂಟ್ಸ್ ಕಾರ್ಖಾನೆ ಜಮೀನು ನೀಡಿದ ಕುಟುಂಬಗಳಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗ ನೀಡುವುದಾಗಿ ಹೇಳಿತ್ತು. ಆದರೆ ಕೆಲಸ ನೀಡದೆ ವಂಚನೆ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಹೀಗಾಗಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸುವ ಮೂಲಕ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ:'ಕೈ' ನಂಬಿ ಕೆಟ್ಟೆ ಎಂದ ಹೆಚ್ಡಿಕೆ: ಸಿದ್ದರಾಯ್ಯ, ಸಿ.ಟಿ.ರವಿ ಟಾಂಗ್
ಅಷ್ಟೇ ಅಲ್ಲದೆ ತಮ್ಮ ಸಮಸ್ಯೆ ಪರಿಹರಿಸುವಂತೆ ಗ್ರಾಮಸ್ಥರು ತಹಶೀಲ್ದಾರ್ ಮಹೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದು, ಸಮಸ್ಯೆ ಪರಿಹಾರವಾಗೋವರೆಗೂ ಗ್ರಾಮ ಪಂಚಾಯಿತಿ ಚುನಾವಣೆ ಬೇಡ ಎಂದು ಗ್ರಾಮಸ್ಥರು ನಿರ್ಧರಿಸಿದ್ದಾರೆ.