ಮೈಸೂರು:ಮುಂಬೈನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಹೆದರಿ ಜಿಲ್ಲೆಗೆ ಬೈಕ್ನಲ್ಲಿ ಬಂದಿದ್ದ ಮೂವರಲ್ಲಿ ಓರ್ವ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, 18 ದಿನಗಳ ಬಳಿಕ ಹೊಸದಾಗಿ ಹೊಸ ಪ್ರಕರಣ ಪತ್ತೆಯಾದಂತಾಗಿದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ನಿನ್ನೆ ಮುಂಬೈನಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಗ್ರಾಮಯೊಂದರ ಮೂವರು ಯುವಕರು ಬೈಕ್ನಲ್ಲಿ ಬರುವಾಗ ಗಡಿ ಚೆಕ್ ಪೋಸ್ಟ್ನಲ್ಲಿ ಸಿಕ್ಕಿ ಬಿದ್ದಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ಇರುವುದು ಪತ್ತೆಯಾಗಿದ್ದು, ಈ ಮೂಲಕ 18 ದಿನಗಳ ಬಳಿಕ ಜಿಲ್ಲೆಯಲ್ಲಿ ಮೊದಲ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್. ಜಿ .ಶಂಕರ್ ತಿಳಿಸಿದರು.
ಜಿಲ್ಲೆಯಲ್ಲಿ 701 ಜನರನ್ನು ಕ್ವಾರಂಟೈನ್ನಲ್ಲಿದ್ದು, ನಿನ್ನೆಯ ಪ್ರಕರಣ ಸೇರಿದಂತೆ 91ಸೋಂಕಿತ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 90 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು , ಒಬ್ಬ ವ್ಯಕ್ತಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.