ಮೈಸೂರು: ಮೊದಲ ಹಂತದಲ್ಲಿ ರಾಜ್ಯದಲ್ಲಿ ನೇರ ಪಾವತಿ ಅಡಿ ಕೆಲಸ ಮಾಡುತ್ತಿರುವ 11,113 ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುತ್ತಿದ್ದು, 2ನೇ ಹಂತದಲ್ಲಿ 12,867 ಪೌರ ಕಾರ್ಮಿಕರನ್ನು ಖಾಯಂ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಕೋಟೆ ಶಿವಣ್ಣ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೌರಕಾರ್ಮಿಕರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಕುಂದುಕೊರತೆ ಸಭೆಯ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. 2ನೇ ಹಂತದ ಪೌರ ಕಾರ್ಮಿಕರ ಖಾಯಮಾತಿಗೆ ಈಗಾಗಲೇ ಆರ್ಥಿಕ ಇಲಾಖೆಯ ಅನುಮತಿ ಪಡೆಯಲಾಗಿದೆ. ಇದು ಒಂದು ಐತಿಹಾಸಿಕ ನಿರ್ಧಾರವಾಗಿದೆ. ಮುಖ್ಯಮಂತ್ರಿಗಳು ಪೌರ ಕಾರ್ಮಿಕರ ಖಾಯಂಗೆ ಎಷ್ಟೇ ಅನುದಾನ ಅಗತ್ಯವಿದ್ದರೂ ಒದಗಿಸುವುದಾಗಿ ತಿಳಿಸಿದ್ದಾರೆ ಎಂದರು.
ಮಾಸ್ಟರ್ ಹೆಲ್ತ್ ಚೆಕ್‌ಅಪ್:ಹೊರಗುತ್ತಿಗೆಯ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಗುತ್ತಿಗೆ ಆದಾರವನ್ನು ತೆಗೆದು ನೇರಪಾವತಿಯ ಯೋಜನೆಯಡಿಗೆ ತರುವ ಉದ್ದೇಶ ಹೊಂದಲಾಗಿದೆ. ಮುಖ್ಯಮಂತ್ರಿಗಳು ರಾಜ್ಯದಲ್ಲಿರುವ ಪೌರ ಕಾರ್ಮಿಕರಿಗೆ ನೇರಪಾವತಿ ಮಾಡುವ ಸಂಬಂಧ ಹಾಗೂ ಪೌರ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯಲ್ಲಿ ನಾನು ಸಹ ಇದ್ದು ಈಗಾಗಲೇ 3 ವರದಿಗಳನ್ನು ನೀಡಲಾಗಿದೆ. ಪೌರ ಕಾರ್ಮಿಕರಿಗೆ ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಪ್ರತಿ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಮಾಸ್ಟರ್ ಹೆಲ್ತ್ ಚೆಕ್‌ಅಪ್ ಮಾಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ವಿವಿಧ ಇಲಾಖೆಗಳು, ಬಸ್ ಸ್ಟಾಂಡ್‌ಗಳು ಹಾಗೂ ಖಾಸಗಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರ ಸರ್ವೇ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸರ್ವೇ ಮಾಲಾಗುತ್ತಿದೆ. ರಾಜ್ಯದಲ್ಲಿ ಪೌರ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆಯುವಲ್ಲಿ ಹಿಂದೆ ಉಳಿದಿದ್ದಾರೆ. ಇವರ ಶಿಕ್ಷಣಕ್ಕೆ ಉತ್ತೇಜನ ನೀಡುವ ಸಲುವಾಗಿ ಎಸ್ಎಸ್ಎಲ್ಸಿಯಿಂದ ಪದವಿ ಶಿಕ್ಷಣದವರೆಗೆ ಉತ್ತಮ ಅಂಕ ಪಡೆದ ಪೌರ ಕಾರ್ಮಿಕರ ಮಕ್ಕಳಿಗೆ ಪ್ರತಿ ಜಿಲ್ಲೆಯಲ್ಲಿ ಸನ್ಮಾನ ಮಾಡಲಾಗಿದೆ ಎಂದರು.
ವಿಶ್ರಾಂತಿ ಗೃಹ ನಿರ್ಮಿಸಲು ಯೋಜನೆ: ಪೌರ ಕಾರ್ಮಿಕರಿಗೆ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಅಗತ್ಯ ಜಾಗ ಗುರುತಿಸಲಾಗುತ್ತಿದೆ. ಈ ಬಗ್ಗೆ ಅಧ್ಯಯನ ನಡೆಸಲು ನನ್ನನ್ನು ಒಳಗೊಂಡಂತೆ ಗುಜರಾತ್‌ಗೆ 15 ಜನರ ತಂಡ ಭೇಟಿ ನೀಡಿ ವರದಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಪೌರ ಕಾರ್ಮಿಕರನ್ನು ಒಳಗೊಂಡಂತೆ ಅಧ್ಯಯನ ನಡೆಸಲು ಸಿಂಗಾಪುರಕ್ಕೆ ಭೇಟಿ ನೀಡಲಾಗಿತ್ತು. ಪೌರ ಕಾರ್ಮಿಕರಿಗೆ ಸ್ವಚ್ಚತಾ ಪರಿಕರಗಳನ್ನು ನೀಡಲಾಗುತ್ತಿದೆ. ಆದರೆ ಇದರ ಬಳಕೆ ಸರಿಯಾಗಿ ಆಗುತ್ತಿಲ್ಲ. ಆದ್ದರಿಂದ ಪೌರ ಕಾರ್ಮಿಕರಿಗೆ ಅನುಕೂಲವಾಗಿರುವ ಪ್ರದೇಶವಾರು ಸ್ವಚ್ಚತಾ ಪರಿಕರಗಳನ್ನು ನೀಡಲು ಎಕ್ಸ್ಪರ್ಟ್ ಕಮಿಟಿಯಿಂದ ವರದಿ ಪಡೆದು ಪರಿಕರಗಳ ತಯಾರಿಕೆಗೆ ಕಾರ್ಯಾದೇಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.