ಮೈಸೂರು: ಕಳೆದ ವರ್ಷ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಚಿತ್ರ ನಿರ್ಮಾಪಕ ಸಂದೇಶ್ ನಾಗರಾಜ್, ನಿನ್ನೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವುದಾಗಿ ಹೇಳಿದ್ದಾರೆ. ಖ್ಯಾತ ನಿರ್ಮಾಪಕ, ಉದ್ಯಮಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕಳೆದ ವರ್ಷ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದು, ಆನಂತರ ನಾನು ಬಿಜೆಪಿಗೆ ಸೇರಿದಾಗ ಕೊಟ್ಟ ಮಾತಿನಂತೆ ಬಿಜೆಪಿಯವರು ನಡೆದುಕೊಳ್ಳಲಿಲ್ಲ. ಆದ್ದರಿಂದ ಈಗ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ನಿನ್ನೆ ರಾಜೀನಾಮೆ ನೀಡಿರುವುದಾಗಿ ಸಂದೇಶ್ ನಾಗರಾಜ್ ಬೆಂಗಳೂರಿನಲ್ಲಿ ತಿಳಿಸಿದ್ದು, ಶೀಘ್ರವೇ ಕಾಂಗ್ರೆಸ್ ಸೇರುವುದಾಗಿ ತಿಳಿಸಿದ್ದಾರೆ.
ಇಂದಿನ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ಮುಂದೂಡಿಕೆ:ಬುಧವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ಹಾಗೂ ಸಂದೇಶ್ ನಾಗರಾಜ್ ಇಬ್ಬರು ಒಟ್ಟಿಗೆ ಕಾಂಗ್ರೆಸ್ ಪಕ್ಷವನ್ನು ಸೇರಿ ಎಂಬ ಕೆಪಿಸಿಸಿ ಮಾಹಿತಿಯ ಹಿನ್ನೆಲೆಯಲ್ಲಿ, ಪಕ್ಷ ಸೇರ್ಪಡೆ ಕಾರ್ಯಕ್ರಮ ಮುಂದಕ್ಕೆ ಹೋಗಿದೆ. ಏಕೆಂದರೆ ಹೆಚ್. ವಿಶ್ವನಾಥ್ ಸದ್ಯ ಬಿಜೆಪಿ ನಾಮನಿರ್ದೇಶನದ ವಿಧಾನ ಪರಿಷತ್ ಸದಸ್ಯರಾಗಿದ್ದು, ಅವರು ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೆ ಕೆಲವು ತಾಂತ್ರಿಕ ಆಡಚಣೆಗಳಿವೆ. ಈ ಹಿನ್ನೆಲೆಯಲ್ಲಿ ಅವರು ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಆಗಬೇಕು ಅಥವಾ ಚುನಾವಣೆ ಮುಗಿದ ನಂತರ ಕಾಂಗ್ರೆಸ್ಗೆ ಸೇರುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಸಂದೇಶ್ ನಾಗರಾಜ್ ಕಾಯಬೇಕಾಗಿರುವ ಅನಿವಾರ್ಯತೆ ಇದೆ.
ಸಂದೇಶ್ ನಾಗರಾಜ್ ಅವರ ರಾಜಕೀಯ ಹಿನ್ನೆಲೆ:ಕಳೆದ 40 ವರ್ಷಗಳಿಂದ ವಿವಿಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ನಿರ್ಮಾಪಕ ಸಂದೇಶ್ ನಾಗರಾಜ್, ಎಸ್ ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ 2003 ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. 2004 ರಲ್ಲಿ ಮೈಸೂರು ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದರು. ಆನಂತರ ಮೈಸೂರು ಭಾಗದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದಾಗ, ಸಂದೇಶ್ ನಾಗರಾಜ್ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದರು.