ಮೈಸೂರು:ಕಬ್ಬಿನ ಬಾಕಿ ಪಾವತಿ, ಪಂಪ್ಸೆಟ್ಗೆ ವಿದ್ಯುತ್ ಪೂರೈಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟಿಸಿದರು. ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಗರದ ಲಲಿತ್ ಮಹಲ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಯಿತು. ನಂತರ ಡಿಸಿ ಕಚೇರಿಯ ಮುಂಭಾಗದ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ಮುಂದುವರೆಸಿದರು.
ಕಬ್ಬಿನ 150 ರೂ. ಬಾಕಿ, ಕೃಷಿ ಪಂಪ್ಸೆಟ್ಗಳಿಗೆ ನಿರಂತರ ವಿದ್ಯುತ್, ನಾಲೆಗಳಿಗೆ ನೀರು ಬಿಡಲು ಮತ್ತು ಕಬ್ಬಿಗೆ ಎಫ್ಆರ್ಪಿ ದರದ ಆಧಾರದ ಮೇಲೆ ರೈತರಿಗೆ ಕಾರ್ಖಾನೆಗಳು ಹಣ ಪಾವತಿ ಮಾಡುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಸರ್ಕಾರವನ್ನು ಒತ್ತಾಯಿಸಿದರು. ಹಿಂದಿನ ಸರ್ಕಾರವೂ ರೈತರ ಯಾವುದೇ ಬೇಡಿಕೆಗಳನ್ನು ಈಡೇರಿಸಿರಲಿಲ್ಲ. ಈಗ ಹೊಸ ಸರ್ಕಾರ ಬಂದಿದೆ, ರೈತರ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ಸರ್ಕಾರ ಬಂದು ಹಲವು ತಿಂಗಳಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೆರವಣಿಗೆಯಲ್ಲಿ ಆಗಮಿಸಿದ ರೈತರನ್ನು ಪೊಲೀಸರು ಡಿಸಿ ಕಚೇರಿಯ ಒಳಬಿಡದೇ ಇದ್ದುದರಿಂದ ಕಚೇರಿ ಮುಂಭಾಗದ ರಸ್ತೆಯಲ್ಲೇ ರೈತರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಬರುವಂತೆ ಆಗ್ರಹಿಸಿದರು. ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ರೈತರನ್ನು ವಶಕ್ಕೆ ಪಡೆಯಲು ಮುಂದಾದರು. ಆಗ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಮದಲ್ಲಿ ಬೀಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.