ಮೈಸೂರು: ಚಾಮರಾಜನಗರ ಮೀಸಲು ಕ್ಷೇತ್ರದ ಅಭ್ಯರ್ಥಿ ಹಾಗೂ ಹಾಲಿ ಸಂಸದ ಆರ್.ಧ್ರುವನಾರಾಯಣ ಅವರು ಚಾಮುಂಡಿಬೆಟ್ಟ ತಪ್ಪಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರd ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿ ಸುತ್ತೂರು ಶಾಖಾ ಮಠಕ್ಕೆ ಆಗಮಿಸಿದ ಅವರು ಸ್ವಾಮೀಜಿ ಆಶೀರ್ವಾದ ಪಡೆದರು.
ಬಳಿಕ ಮಾಧ್ಯಮಗಳೊಂದಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ನಮ್ಮ ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಹಾಗೂ ಬಿಜೆಪಿ ಸರ್ಕಾರದ ಮೋದಿಯವರ ವೈಫಲ್ಯವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತೇವೆ. ನಮ್ಮ ಮಧ್ಯೆ ಸಾಮರಸ್ಯವಿದೆ. ಚಾಮರಾಜನಗರದಿಂದ ಧ್ರುವ ನಾರಾಯಣ ಅವರು ಸ್ಪರ್ಧಿಸುತ್ತಿದ್ದು, ಅವರಿಗೆ ಶುಭ ಕೋರಿದ್ದೇವೆ. ಮೈಸೂರು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಗಳು ಗೆಲುತ್ತಾರೆ. ಯಾರಲ್ಲೂ ಅಸಮಾಧಾನವಿಲ್ಲ ಎಂದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಡಾ.ಎಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸಾಥ್ ನೀಡಿದರು.