ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಮೈಸೂರು ಭಾಗದ ಒಕ್ಕಲಿಗ ಮುಖಂಡರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ, ಮಂಡ್ಯ ಜಿಲ್ಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ, ಹಾಸನ ಜಿಲ್ಲೆಯಲ್ಲಿ ಎ.ಮಂಜು, ಚಾಮರಾಜನಗರ ಮೀಸಲು ಕ್ಷೇತ್ರ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ಅವರ ಗೆಲುವಿಗೆ ಶ್ರಮಿಸಿ. ಆ ಮೂಲಕ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರು ಕಟಿಬದ್ದರಾಗಿ ದುಡಿಯೋಣವೆಂದು ಸಲಹೆ ನೀಡಿದ್ದಾರೆ.
ರಾಜ್ಯ ಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗಿ, ಕೇಂದ್ರ ಸರ್ಕಾರದ ಸಾಧನೆಯನ್ನು ಬಿಂಬಿಸೋಣ. ಮೋದಿ ಅವರ ಸಾಧನೆಯಿಂದ ಪ್ರಪಂಚದಲ್ಲಿ ಭಾರತಕ್ಕೆ ಒಳ್ಳೆಯ ಹೆಸರು ಬಂದಿದೆ. ಅವರ ಕೆಲಸ ಕಾರ್ಯಗಳನ್ನು ಜನರ ಮುಂದೆ ಇಟ್ಟು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಗಮನ ಹರಿಸಿ ಎಂದು ಸೂಚನೆ ನೀಡಿದ್ದಾರೆ.
ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಮೈಸೂರು-ಕೊಡಗು ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳನ್ನ ತರುವಲ್ಲಿ ಶ್ರಮಿಸಿದ್ದೇನೆ. ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಒಟ್ಟಾಗಿ ಹೋಗೋಣವೆಂದು ಕರೆ ಕೊಟ್ಟರು.