ಮೈಸೂರು:ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ನೀಡಿರುವ ಎಸ್ಪಿಜಿ (ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್) ಭದ್ರತಾ ಪಡೆಯನ್ನು ಉದ್ದೇಶಪೂರ್ವಕವಾಗಿ ಹಿಂಪಡೆಯಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.
ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಗರದ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾವುದೇ ಸೂಚನೆ ನೀಡದೆ ಏಕಾಏಕಿ ಎಸ್ಪಿಜಿ ಪಡೆಯನ್ನು ಹಿಂಪಡೆದು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ಇಂದಿರಾಗಾಂಧಿ ಅವರು ಆಪರೇಷನ್ ಬ್ಲೂಸ್ಟಾರ್ ಮಾಡದೆ ಇದ್ದಿದ್ದರೆ ಅವರ ಹತ್ಯೆಯಾಗುತ್ತಿರಲಿಲ್ಲ. ರಾಜೀವ್ ಗಾಂಧಿ ಅವರ ಹತ್ಯೆಯೂ ನಡೆಯುತ್ತಿರಲಿಲ್ಲ. ನೆಹರೂ ಕುಟುಂಬದ ಮೇಲಿನ ದ್ವೇಷದಿಂದ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ ಎಂದು ಕಿಡಿಕಾರಿದರು.
ರಾಹುಲ್ ಗಾಂಧಿ ಅವರು ಎಸ್ಪಿಜಿ ಪಡೆ ಬಿಟ್ಟು ಎಲ್ಲಿಯೂ ಹೋಗಿಲ್ಲ. ವೈಯಕ್ತಿಕ ಕಾರಣಗಳಿಂದ ಅವರಿಗೆ ಈ ರೀತಿ ಮಾಡುವುದು ತಪ್ಪು. ಏನಾದರೂ ಹೆಚ್ಚು ಕಡಿಮೆಯಾದರೆ ಯಾರು ಹೊಣೆ. ಪ್ರಧಾನಿ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೀನಿ ಎಂದರು.
ಸೋನಿಯಾ ಹಾಗೂ ರಾಹುಲ್ ಗಾಂಧಿಗೆ ಅವರಿಗೆ ಎಸ್ಪಿಜಿ ಭದ್ರತೆ ವಾಪಸ್ ನೀಡದೆ ಹೋದರೆ ಉಗ್ರ ಹೋರಾಟ ಮಾಡಲಾಗುವುದು. ಇದರ ಬಗ್ಗೆ ಪಕ್ಷದ ಹೈಕಮಾಂಡ್ ಹಾಗೂ ಮುಖಂಡರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಎಚ್ಚರಿಸಿದರು.