ಮೈಸೂರು :ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ನನಗೆ ಮಾತ್ರ ಅಲ್ಲ, ಭಾರತಕ್ಕೆ, ಇಡೀ ವಿಶ್ವಕ್ಕೆ ಸಲಹೆ ಕೊಡುತ್ತಾರೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ವ್ಯಂಗ್ಯವಾಡಿದ್ದಾರೆ.
ಉಸ್ತುವಾರಿ ಸಚಿವರು ಸರಿಯಾಗಿ ಮೈಸೂರಿಗೆ ಬರುತ್ತಿಲ್ಲ ಎಂಬ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ವಿಶ್ವನಾಥ್ ಅವರಿಂದ ಸಲಹೆಗಳನ್ನು ತೆಗೆದುಕೊಳ್ಳುತ್ತೇನೆ. ಮೈಸೂರಿನ ಉಸ್ತುವಾರಿ ಸಚಿವರಾಗಿ ಅವರು ಏನು ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ, ಕಳೆದ ಎರಡು ವರ್ಷಗಳಿಂದ ಉಸ್ತುವಾರಿ ಸಚಿವನಾಗಿ ನಾನು ಎಷ್ಟು ಬಾರಿ ಮೈಸೂರಿಗೆ ಬಂದಿದ್ದೇನೆ ಎಂಬುವುದನ್ನು ಕೇಳಿ ತಿಳಿದುಕೊಳ್ಳಲಿ ಎಂದು ಕುಟುಕಿದರು.
ಕೆಲವು ದಿನಗಳಿಂದ ರಾಜ್ಯಾದ್ಯಂತ ಸುರಿದ ಭಾರೀ ಮಳೆಗೆ ಹಲವರು ಮನೆ ಕಳೆದುಕೊಂಡಿದ್ದಾರೆ. ರೈತರು ಬೆಳೆ, ಜಾನುವಾರುಗಳನ್ನು ಕಳೆದುಕೊಂಡಿದ್ದಾರೆ. ಇವರೆಲ್ಲರಿಗೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವರದಿ ನೀಡುತ್ತಿದ್ದಂತೆ, ಎರಡು ದಿನಗಳಲ್ಲಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಜನರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧವಾಗಿದೆ.
ಮೇ 26ಕ್ಕೆ ದಾವೋಸ್ನಿಂದ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಂತೆ ಜಿಲ್ಲಾಧಿಕಾರಿಗಳ ಮುಖಾಂತರ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು. ಕೆಲವು ಜಿಲ್ಲೆಗಳಲ್ಲಿ ಚುನಾವಣಾ ಆಯೋಗದ ನೀತಿ ಸಂಹಿತೆ ಜಾರಿ ಇರುವುದರಿಂದ ಅತಿವೃಷ್ಟಿಗೆ ಒಳಗಾಗಿರುವ ಪ್ರದೇಶಗಳಿಗೆ ಸಚಿವರು ಭೇಟಿ ನೀಡದಂತೆ ಚುನಾವಣಾ ಆಯೋಗ ಆದೇಶ ನೀಡಿದೆ.