ಮೈಸೂರು: ಉಕ್ರೇನ್ನಲ್ಲಿರುವ ವಿದ್ಯಾರ್ಥಿಗಳ ಕರೆತರುವ ಬಗ್ಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಕುರಿತು ನೋಡಲ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿರುವಂತೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಉಕ್ರೇನ್ನಲ್ಲಿ ಸಿಲುಕಿರುವ ಜಿಲ್ಲೆಯ ವಿದ್ಯಾರ್ಥಿಗಳ ಕುರಿತು ಮಾಹಿತಿ ಪಡೆದುಕೊಂಡರು. ಸರ್ಕಾರ ಎಲ್ಲಾ ರೀತಿಯ ಕ್ರಮಗೈಗೊಳ್ಳುತ್ತಿದ್ದು, ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿರುವಂತೆ ಸೂಚಿಸಿದರು.
ಇದೇ ವೇಳೆ ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಸಚಿವರು ಕೇಳಿದ ಮಾಹಿತಿಗೆ ಉತ್ತರಿಸಿದ ಜಿಲ್ಲಾ ಆರೋಗ್ಯಾಧಿಕಾರಿ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಇಂದು 18 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, 30 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿಸಿದರು.