ಮೈಸೂರು: ರಾಜ್ಯದಲ್ಲಿ ಐಎಎಸ್ ಅಧಿಕಾರಿ ಮತ್ತು ಐಪಿಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಹೆಚ್ಚಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ದಿಯಾಗುತ್ತಿದೆ. ಇದರಿಂದ ರಾಜ್ಯ ಕಾನೂನು ಸುವ್ಯವಸ್ಥೆ ಮೇಲೆ ಜನರಿಗೆ ನಂಬಿಕೆ ಹೋಗುತ್ತಿದೆ. ಇದನ್ನು ತಡೆಯುವಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ್ ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಅವರ ಜಟಾಪಟಿಯನ್ನು ನಿಯಂತ್ರಿಸುವಲ್ಲಿ ರಾಜ್ಯದಲ್ಲಿರುವ ಆಡಳಿತಾರೂಢ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳ ನಡುವಿನ ಜಟಾಪಟಿ ಬಗ್ಗೆ ಸರ್ಕಾರ ನೀರವ ಮೌನ ವಹಿಸಿದೆ. ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದರು.
ರಾಜ್ಯ ಬಿಜೆಪಿ ರಾಜ್ಯಸಭಾ ಸದಸ್ಯರಾದ ಜಗ್ಗೇಶ್, ಪ್ರಧಾನಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅಧಿಕಾರಿಗಳ ನಡುವಿನ ಜಟಾಪಟಿ ಬಗೆಹರಿಸಲು ಪತ್ರ ಬರೆದಿದ್ದಾರೆ. ಅದರ ಅರ್ಥ ಇಲ್ಲಿನ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ಪೂರ್ಣ ವಿಫಲವಾಗಿದೆ. ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಮೇಲೆ ಅವರಿಗೆ ನಂಬಿಕೆ ಇಲ್ಲದೆ, ನೇರ ಪ್ರಧಾನಿ ಮೋದಿಯವರಿಗೆ ಈ ಸಮಸ್ಯೆ ಬಗೆಹರಿಸಲು ಪತ್ರ ಬರೆದಿದ್ದಾರೆ. ಅಧಿಕಾರಿಗಳ ಜಗಳ ನಿಯಂತ್ರಿಸಲು ಸಾಧ್ಯವಿಲ್ಲವೇ ಎಂದು ಸರ್ಕಾರವನ್ನು ಪ್ರಶ್ನಿಸಿದರು.