ಮೈಸೂರು: ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಒಂದು ವರ್ಷದಿಂದ ನಾಗರಾಜು ಎಂಬುವವರು ಗಣಿತ, ವಿಜ್ಞಾನ, ಇಂಗ್ಲಿಷ್ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋದ ಸಂದರ್ಭದಲ್ಲಿ ನಾಗರಾಜು ಎಂಬ ಶಿಕ್ಷಕನನ್ನು ಏಕಾಏಕಿ ಹಂಡುವಿನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ವರ್ಗಾವಣೆ ಮಾಡಿ, ಇನ್ನೊಬ್ಬ ಶಿಕ್ಷಕರನ್ನು ಶಿಕ್ಷಣ ಇಲಾಖೆ ನಿಯೋಜನೆ ಮಾಡಿತ್ತು.
ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎನ್ ರಾಜು ಅವರಿಗೆ ಗ್ರಾಮಸ್ಥರು ಮತ್ತು ವಿಧ್ಯಾರ್ಥಿಗಳು ನಾಗರಾಜು ಅವರೇ ನಮಗೆ ಬೇಕು ಎಂದು ಮನವಿ ಮಾಡಿದ್ದರು. ಆದರೆ, ಮನವಿಗೆ ಕ್ಯಾರೇ ಎನ್ನದ ಅಧಿಕಾರಿಗಳ ವಿರುದ್ಧ ಇಂದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.
ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರನ್ನು ಏಕಾಏಕಿ ವರ್ಗಾವಣೆ ಮಾಡಿರುವುದು ಸರಿಯಲ್ಲ. ಕಳೆದ ಒಂದು ವರ್ಷದಲ್ಲಿ ನಾಗರಾಜು ಎಂಬುವರು ಮೂರು ವಿಷಯಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಿ ಮಕ್ಕಳಿಗೆ ಹಾಗೂ ಗ್ರಾಮಸ್ಥರಿಗೆ ಉತ್ತಮ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸಿದ್ದಾರೆ.