ಮೈಸೂರು: ಕೋವಿಡ್-19 ಸೋಂಕು ಕಡಿಮೆಯಾಗುತ್ತಿರುವ ಹಿನ್ನೆಲೆ, ಪ್ರಯಾಣಿಕರ ಅನುಕೂಲಕ್ಕಾಗಿ ಜುಲೈ 12ರಿಂದ ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಬಸ್ ಸಂಚಾರ ಪುನಾರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಸೋಂಕು ಕಡಿಮೆಯಾಗಿರುವ ಕಾರಣ ಬೆಂಗಳೂರು, ಮೈಸೂರು, ಮಂಗಳೂರು ಹಾಗೂ ತುಮಕೂರು ಒಳಗೊಂಡಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಸಾರಿಗೆ ಕಾರ್ಯಾಚರಣೆ ನಡೆಸಲಾಗುವುದು. ಕರ್ನಾಟಕ ಸರ್ಕಾರದ ಮಾರ್ಗಸೂಚಿಗಳಂತೆ ನಿಗಮದ ಬಸ್ಸುಗಳಲ್ಲಿ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ಪರೀಕ್ಷಾ ವರದಿ ಅಥವಾ ಕನಿಷ್ಠ 1 ಡೋಸ್ ಕೋವಿಡ್ ಲಸಿಕೆ ಪಡೆದಿರುವ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.