ಮೈಸೂರು: ಸಿಂದಗಿ ಹಾಗೂ ಹಾನಗಲ್ನಲ್ಲಿ ನಡೆಯುತ್ತಿರುವುದು ಉಪಚುನಾವಣೆಯಲ್ಲ, ಮತದಾರರ ಮೇಲೆ ನಡೆಯುತ್ತಿರುವ ದರೋಡೆ. ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪ ಮಾಡುತ್ತಿದ್ದಾರೆ. ಹಣದ ಹೊಳೆ ಹರಿಸುತ್ತಿದ್ದಾರೆ ಎಂದು ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆರೋಪಿಸಿದರು.
ನಗರದ ಹಾರ್ಡಿಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಉಪಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಒಬ್ಬರಿಗೊಬ್ಬರು ಆರೋಪ-ಪ್ರತ್ಯಾರೋಪ ಮಾಡುತ್ತಿರುವುದನ್ನು ನೋಡಿದರೆ, ಇದು ಉಪಚುನಾವಣೆ ಹೆಸರಿನಲ್ಲಿ ಜನರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಎನ್ನಿಸುತ್ತದೆ. ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಮತದಾರರು ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಿದರು.