ಮೈಸೂರು:ನಾಳೆ ಮುಖ್ಯಮಂತ್ರಿಗಳ ಬೆಂಗಳೂರು ಮನೆಗೆ ಮುತ್ತಿಗೆ ಹಾಕುತ್ತೇವೆ ಹಾಗೂ ರಾಜ್ಯಾದ್ಯಂತ ಇರುವ ರಾಷ್ಟೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಬೆಳಗ್ಗೆ 11 ಗಂಟೆಯಿಂದ 1 ಗಂಟೆವರೆಗೆ ಬಂದ್ ಮಾಡುತ್ತೇವೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರೂ ಆಗಿರುವ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ಸಂಚಾಲಕ ಕುರುಬೂರು ಶಾಂತಕುಮಾರ್ ಈಟಿವಿ ಭಾರತ್ಗೆ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ. ಇಂದು ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ, ಮುಂದಿನ ಕಾವೇರಿ ಹೋರಾಟದ ಬಗ್ಗೆ ಸಭೆ ನಡೆಸಿದ ಬಗ್ಗೆ ಮಾಹಿತಿ ನೀಡಿದರು.
ಈ ವೇಳೆ ಮಾತನಾಡಿದ ಅವರು, ಸೆಪ್ಟೆಂಬರ್ 26 ರಂದು ಬೆಂಗಳೂರು ಬಂದ್ ಮಾಡಿದಾಗ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸಬೇಕು ಎನ್ನುವ ಆಗ್ರಹದ ಜೊತೆಗೆ 4 ಒತ್ತಾಯಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ನೀಡಿದ್ದೆವು. ಆದರೆ ಸರ್ಕಾರ 2 ದಿನ ಕಳೆದರೂ ಯಾವುದೇ ಒತ್ತಾಯಗಳನ್ನು ಈಡೇರಿಸಿಲ್ಲ. ಜೊತೆಗೆ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನು ನಿಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಶುಕ್ರವಾರ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯಿಂದ ರಾಜ್ಯಾದ್ಯಂತ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ಬೆಳಗ್ಗೆ ಹನ್ನೊಂದು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಬಂದ್ ಮಾಡಿ ನಂತರ ಬೆಂಗಳೂರಿನಲ್ಲಿ ಇರುವ ಸಿಎಂ ಮನೆಗೆ ಮುತ್ತಿಗೆ ಹಾಕುವ ಕೆಲಸವನ್ನು ಮಾಡುತ್ತೇವೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದರು.