ರಾಯಚೂರು:ರಾಜ್ಯದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿದು ಬಿಡಲಾಗಿದೆ. ಇದರಿಂದ ಜಿಲ್ಲೆಯ ಎಡಭಾಗದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿ ತೀರದಲ್ಲಿ ಪ್ರವಾಹ ಭೀತಿ ಆವರಿಸಿದೆ.
ತುಂಗಭದ್ರಾ ಜಲಾಶಯದಿಂದ 1.10 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ನದಿ ತೀರದಲ್ಲಿ ಪ್ರವಾಹ ಭೀತಿ - ತುಂಗಭದ್ರಾ ಡ್ಯಾಂ ನೀರು ಬಿಡುಗಡೆ
ತುಂಗಭದ್ರಾ ನದಿ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಟಿಬಿ ಡ್ಯಾಂ (Tungabhadra Dam) ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಇಂದು 1.10 ಲಕ್ಷ ಕ್ಯೂಸೆಕ್ ಹೆಚ್ಚುವರಿ ನೀರು ಹರಿಬಿಡಲಾಗಿದೆ. ಇದರಿಂದ ತುಂಗಭದ್ರಾ ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗುವ ಸಾಧ್ಯತೆ ಇದೆ.
ಧಾರಾಕಾರ ಮಳೆಯಿಂದಾಗಿ ಜಲಾಶಯಕ್ಕೆ ಲಕ್ಷಾಂತರ ಕ್ಯೂಸೆಕ್ ನೀರು ಒಳಹರಿವಿದೆ. ಸದ್ಯ ಜಲಾಶಯದಿಂದ 1.10 ಲಕ್ಷ ಕ್ಯೂಸೆಕ್ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾದರೆ, ನದಿಗೆ ನೀರು ಹರಿಸುವ ಪ್ರಮಾಣವೂ ಏರಿಕೆಯಾಗುತ್ತದೆ. ಇದರಿಂದಾಗಿ ಸಿಂಧನೂರು, ಮಾನವಿ, ರಾಯಚೂರು ತಾಲೂಕಿನ ತುಂಗಭದ್ರಾ ನದಿಯ ತೀರದಲ್ಲಿ ಪ್ರವಾಹ ಭೀತಿ ಉಂಟಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ನದಿತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಆಯಾ ಪಂಚಾಯಿತಿಗಳಿಂದ ಡಂಗುರ ಸಾರಿಸುತ್ತಿದೆ.
ಪ್ರವಾಹ ಭೀತಿ ಎದುರಿಸಲು ಜಿಲ್ಲಾಡಳಿತದಿಂದ ಅಗತ್ಯ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಇದೇ ವೇಳೆ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಭತ್ತ, ಹತ್ತಿ ಸೇರಿದಂತೆ ನಾನಾ ಬೆಳೆಗಳಿಗೆ ಹಾನಿ ಉಂಟಾಗುತ್ತಿದ್ದು, ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.