ಕರ್ನಾಟಕ

karnataka

ETV Bharat / state

ರಾಯಚೂರು: ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ ಡಿಕ್ಕಿ, ವಿದ್ಯಾರ್ಥಿ ಸಾವು - etv bharat kannada

ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ರಾಯಚೂರಲ್ಲಿ ನಡೆದಿದೆ. ​

ಟ್ರ್ಯಾಕ್ಟರ್​ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು
ಟ್ರ್ಯಾಕ್ಟರ್​ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು

By ETV Bharat Karnataka Team

Published : Aug 25, 2023, 7:11 PM IST

Updated : Aug 25, 2023, 10:26 PM IST

ಘಟನೆ ಬಗ್ಗೆ ಮಾಜಿ ಗ್ರಾ.ಪಂ ಸದಸ್ಯರ ಹೇಳಿಕೆ

ರಾಯಚೂರು:ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್​ ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಲ್ಲೇಶ್(16) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಎಸ್​ಆರ್​ಪಿಎಸ್​ ಪದವಿಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಲ್ಲೇಶ್​ ಎಂದಿನಂತೆ ಕಾಲೇಜಿಗೆ ತೆರಳಲು ಗ್ರಾಮದ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ. ಈ ವೇಳೆ ಇಡಪನೂರು ಗ್ರಾಮದ ಬಳಿ ತುಂಗಭದ್ರಾ ನದಿಯಿಂದ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಗುದ್ದಿದೆ ಎಂದು ತಿಳಿದುಬಂದಿದೆ.

ಸ್ಥಳೀಯರು ಕೂಡಲೇ ಆತನನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಮಾರ್ಗಮಧ್ಯೆ ಮಲ್ಲೇಶ್‌​ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಮನೆಯ ಹಿರಿಮಗನಾಗಿದ್ದ ಮಲ್ಲೇಶ್​ ಸಾವಿನಿಂದ ಕುಟುಂಬಸ್ಥರು ಕಂಗಾಲಾಗಿದ್ದು, ಪರಿಹಾರ ಒದಗಿಸುವ ಮೂಲಕ ನ್ಯಾಯ ದೊರಕಿಸುವಂತೆ ಒತ್ತಾಯಿಸಿದ್ದಾರೆ.

ಗ್ರಾ.ಪಂ. ಮಾಜಿ ಸದಸ್ಯ ರಾಮಚಂದ್ರ ಎಂಬವರು ಮಾತನಾಡಿ, ತುಂಗಭದ್ರಾ ನದಿಯಲ್ಲಿ ಹೇರಳವಾಗಿ ಮರಳು ದೊರೆಯುತ್ತಿದೆ. ಹಾಗಾಗಿ ರಾತ್ರಿ-ಹಗಲು ಎನ್ನದೇ ಅಕ್ರಮ ಮರಳು ಸಾಗಾಟ ಮಾಡಲಾಗುತ್ತಿದೆ. ಟ್ರಾಕ್ಟರ್​ನಲ್ಲಿ ಅಕ್ರಮ ಮರಳು ಸಾಗಿಸುತ್ತಿದ್ದಾಗ ಚಾಲಕ ಅತಿವೇಗದಿಂದ ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ. ಇಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಹಾಸ್ಟೆಲ್​ ವಾರ್ಡನ್​ ಮೇಲೆ ಹಲ್ಲೆ:ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಹಾಸ್ಟೆಲ್​ ವಾರ್ಡನ್​ ಮೇಲೆ ಯುವಕನೊಬ್ಬ ಹಲ್ಲೆ ಮಾಡಿರುವ ಘಟನೆ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರ್ಡನ್ ಶರಣಪ್ಪ ಸಾಹುಕಾರ ಎಂಬವರ ಮೇಲೆ ಮಲ್ಲರಡ್ಡೆಪ್ಪ ದೊಡಮನಿ ಎಂಬಾತ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೇವಾನಿರತ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಸರ್ಕಾರಿ ನೌಕರರ ಸಂಘದ ಮುಖಂಡರು ಮತ್ತು ಸದಸ್ಯರು ಆರೋಪಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಇಂದು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ:ಹಾಸ್ಟೆಲ್ ವಾರ್ಡನ್ ಮೇಲೆ ಹಲ್ಲೆ ಆರೋಪ: ದೂರು ಪ್ರತಿ ದೂರು ದಾಖಲು

Last Updated : Aug 25, 2023, 10:26 PM IST

ABOUT THE AUTHOR

...view details