ರಾಯಚೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ವಿವಿಧ ಜಿಲ್ಲೆಗಳಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ರಾಯಚೂರು ಜಿಲ್ಲೆಯಲ್ಲಿ ಕಾಂಗ್ರೆಸ್ನ ಇಬ್ಬರು ಹಾಲಿ ಶಾಸಕರು, ಬಿಜೆಪಿ ಮಾಜಿ ಶಾಸಕ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಎಸ್ಡಿಪಿಐ ಪಕ್ಷದ ಅಭ್ಯರ್ಥಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು.
ನಗರದ ತಹಸೀಲ್ದಾರ್ ಕಚೇರಿಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ದದ್ದಲ್ ಅವರು ಬೆಂಬಲಿಗರು, ಮುಖಂಡರೊಂದಿಗೆ ಆಗಮಿಸಿ ತಮ್ಮ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ಮುಂದಿನ ದಿನದಲ್ಲಿ ಮತ್ತೊಮ್ಮೆ ಪಕ್ಷದ ಮುಖಂಡರು ಮತ್ತು ಬೆಂಬಲಿಗರೊಂದಿಗೆ ಆಗಮಿಸಿ ಮತ್ತೆ ನಾಮಪತ್ರ ಸಲ್ಲಿಕೆ ಮಾಡುವುದಾಗಿಯೂ ಹೇಳಿದರು.
ಮಸ್ಕಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಆರ್.ಬಸವನಗೌಡ ತುರುವಿಹಾಳ ಚುನಾವಣೆ ಅಧಿಕಾರಿಗೆ ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದರು. ಬಳಿಕ ಮತ್ತೊಮ್ಮೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಎಸ್ಡಿಪಿಐ ಪಕ್ಷದ ಮುಖಂಡ ಸೈಯದ್ ಇಸಾಕ್ ರಾಯಚೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ನಾಮಪತ್ರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಕೆ ಮಾಡಿದರು. ನಗರದ ನೇತಾಜಿ ನಗರದಿಂದ, ಪಕ್ಷದ ಮುಖಂಡರು, ಕಾರ್ಯಕರ್ತರು, ಬೆಂಬಲಿಗರೊಂದಿಗೆ ರ್ಯಾಲಿ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಆಗಮಿಸಿದ ಅವರು ಚುನಾವಣಾಧಿಕಾರಿ ನಾಮಪತ್ರವನ್ನು ಸಲ್ಲಿಸಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ರಾಯಚೂರು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರುವಿಹಾಳ ಮಾತನಾಡಿ, "ಇಂದು ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಿದ್ದೇನೆ. ಕೆಲವೇ ದಿನಗಳಲ್ಲಿ ಜಿಲ್ಲಾ ಮುಖಂಡರು, ರಾಜ್ಯ ನಾಯಕರು, ಕಾರ್ಯಕರ್ತರು, ಬೆಂಬಲಿಗರು, ಹಿತೈಷಿಗಳೊಂದಿಗೆ ಆಗಮಿಸಿ ಭಿ-ಫಾರಂನೊಂದಿಗೆ ನಾಮಪತ್ರವನ್ನು ಸಲ್ಲಿಸುತ್ತೇನೆ. ಚುನಾವಣೆಯಲ್ಲಿ ನೂರಕ್ಕೆ ನೂರು ಜಯಗಳಿಸುತ್ತೇನೆ" ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯಪುರದಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ:ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ರಮೇಶ ಭೂಸನೂರ ಮತ್ತು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಚುನಾವಣಾಧಿಕಾರಿ ಶಿದ್ರಾಮ ಮಾರಿಹಾಳ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.