ರಾಯಚೂರು :ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಹಿನ್ನೆಲೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಸ್ಕಿ ಪಟ್ಟಣಕ್ಕೆ ಆಗಮಿಸಲಿದ್ದಾರೆ. ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪರ ಪಟ್ಟಣದ ಶ್ರೀಭ್ರಮರಂಭಾ ದೇವಾಲಯದ ಬಳಿ ಮಾ.20ರಂದು ಮೈದಾನದಲ್ಲಿ ಸಂಜೆ 4.30ಕ್ಕೆ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಭಾಗವಹಿಸುವ ಮೂಲಕ ಉಪಚುನಾವಣೆ ಮತಬೇಟೆಯನ್ನ ಸಿಎಂ ಮಾಡಲಿದ್ದಾರೆ.
ಸಿಎಂಗೆ ಸಾಥ್ ನೀಡಲು ಸ್ಥಳೀಯ ಶಾಸಕರು, ಸಚಿವರು ಕೂಡ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಬಳಿಕ ಸಿಂಧನೂರು ಪಟ್ಟಣದ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಮಾ.21ರಂದು ಪುನಃ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಸಮಾವೇಶದ ಹಿನ್ನೆಲೆಯಲ್ಲಿ ವೇದಿಕೆ ಸಿದ್ಧಪಡಿಸಲಾಗುತ್ತಿದೆ. ಸದ್ಯ ಬಿಜೆಪಿಯಿಂದ ಅಧಿಕೃತವಾಗಿ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಬಿಜೆಪಿಯಿಂದ ಕಣಕ್ಕೆ ಇಳಿಯಲಿದ್ದು, ಅಧಿಕೃತ ಘೋಷಣೆ ಬಾಕಿಯಿದೆ.