ರಾಯಚೂರು:ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರದಲ್ಲಿ ಇದೀಗ ಸಚಿವ ಸ್ಥಾನಕ್ಕೆ ಶಾಸಕರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಹೈದ್ರಾಬಾದ್ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲೂ ಸಚಿವ ಸ್ಥಾನದ ಆಕ್ಷಾಂಕ್ಷಿಗಳಲ್ಲಿ ನಿರೀಕ್ಷೆಗಳು ಗರಿಗೆದರಿವೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪತನ ಬಳಿಕ, ನೂತನವಾಗಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಇದೀಗ ರಾಜ್ಯದಲ್ಲಿ ನೂತನವಾಗಿ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ಸರ್ಕಾರದ ಸಚಿವ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದ್ದು, ದೇವದುರ್ಗ ಶಾಸಕ ಕೆ. ಶಿವನಗೌಡ ನಾಯಕ ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಶಾಸಕ ಕೆ.ಶಿವನಗೌಡ ನಾಯಕ 4ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮೊದಲ ಬಾರಿಗೆ ಜೆಡಿಎಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಬಳಿಕ, ಬಿಜೆಪಿಯ ಅಪರೇಷನ್ ಕಮಲಕ್ಕೆ ಒಳಗಾಗಿ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಮರು ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಚಿವ ಸ್ಥಾನ ಪಡೆದುಕೊಂಡಿದ್ದರು.