ರಾಯಚೂರು:ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವೈದ್ಯಕೀಯ ಸೇವೆ ಮತ್ತಷ್ಟು ಬಲ ಪಡಿಸುವ ನಿಟ್ಟಿನಲ್ಲಿ ಕೊರೊನಾ ತುರ್ತು ಸೇವೆಗಾಗಿ ವೈದ್ಯಕೀಯ ವಿದ್ಯಾರ್ಥಿಗಳ ನೇಮಕ ಮಾಡಿಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಓದಿ: ಕರ್ಫ್ಯೂ ಮುಂದುವರಿಕೆ ಬಗ್ಗೆ ಟಾಸ್ಕ್ಫೋರ್ಸ್ ನಿರ್ಧರಿಸಲಿದೆ: ಬಸವರಾಜ ಬೊಮ್ಮಾಯಿ
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ನಿಯಂತ್ರಣ ಕ್ರಮಗಳ ಕುರಿತು ಜಿಲ್ಲೆಯ ಜನ ಪ್ರತಿನಿಧಿಗಳು ಹಾಗೂ ತಾಲೂಕು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದರು. ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಾ ಸಾಗಿದ್ದು, ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ವೈದ್ಯಕೀಯ ಕ್ಷೇತ್ರ ಬಲ ಪಡಿಸುವ ನಿಟ್ಟಿನಲ್ಲಿ ಈ ವರ್ಷ ಎಂಬಿಬಿಎಸ್ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ನೇಮಕ ಮಾಡಿಕೊಳ್ಳುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.
ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂಧಿಸಿದ್ದು, ಅವ್ಯಶಕತೆ ಇರುವ ಕಡೆ ವೈದ್ಯಕೀಯ ವಿದ್ಯಾರ್ಥಿಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಕೊರೊನಾ ಹೆಮ್ಮಾರಿಯ ಸರಪಳಿ ತಡೆಗೆ ರಾಜ್ಯ ಸರ್ಕಾರ ಲಾಕ್ ಡೌನ್ ಮಾಡಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಜನರು ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು, ಸರ್ಕಾರದೊಂದಿಗೆ ಸಹಕರಿಸಬೇಕು.
ಜಿಲ್ಲೆಯ ತಾಲೂಕು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಎಲ್ಲರೂ ಹೆಚ್ಚಿನ ಆ್ಯಂಬುಲೆನ್ಸ್ ಗಳು ಹೆಚ್ಚಿನ ಆಮ್ಲಜನಕ ಪೂರೈಕೆ ಕುರಿತು ಗಮನಕ್ಕೆ ತಂದಿದ್ದು, ಮುಖ್ಯಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಾನು ಜಿಲ್ಲೆಗೆ ಹೆಚ್ಚುವರಿ ಆಮ್ಲಜನಕ ಹಾಗೂ ಚುಚ್ಚುಮದ್ದು ಪೂರೈಕೆಗೆ ಮನವಿ ಮಾಡಿದ್ದೇನೆ. ಜಿಲ್ಲೆಯಲ್ಲಿ ಕೊರೊನಾ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಯಾಗದ ಹಾಗೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದು, ಜನರು ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.