ರಾಯಚೂರು: ಪೊಲೀಸ್ ಕಾನ್ಸ್ಟೇಬಲ್ಗೆ ಕಪಾಳ ಮೋಕ್ಷ ಮಾಡಿದ ಮಾಜಿ ಶಾಸಕ ಎ. ಪಾಪಾರೆಡ್ಡಿ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
ನಗರದ ಪಶ್ಚಿಮ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ರಾಘವೇಂದ್ರರವರ ಕರ್ತವ್ಯಕ್ಕೆ ಅಡ್ಡಿಯನ್ನುಂಟು ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿರುವ ಆರೋಪದ ಮೇಲೆ ಐಪಿಸಿ ಸೆಕ್ಷನ್ 143, 147, 341, 323, 504, 283, 353 ಸಹಿತ 149 ಕಲಂ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಮಾಜಿ ಶಾಸಕ ಎ. ಪಾಪಾರೆಡ್ಡಿ, ಬಿಜೆಪಿ ಮುಖಂಡರಾದ ಜೇಮ್ಸ್, ಹನುಮೇಶ, ಸಿದ್ದನಗೌಡ ನೆಲಹಾಳ, ಶಿವು ಜಾಲಿಬೆಂಚಿ ವಿರುದ್ಧ ದೂರು ದಾಖಲಾಗಿದೆ. ಆದ್ರೆ ಈವರೆಗೆ ಯಾರ ಬಂಧನವೂ ಆಗಿಲ್ಲ.
ಪೊಲೀಸ್ ಕಾನ್ಸ್ಟೇಬಲ್ಗೆ ಕಪಾಳ ಮೋಕ್ಷ ಮಾಡಿದ ಎ. ಪಾಪಾರೆಡ್ಡಿ ಘಟನೆ ವಿವರ:
ಮಾಜಿ ಸಿಎಂ ಸಿದ್ದರಾಮಯ್ಯ ದಲಿತರ ಕುರಿತು ಅವಹೇಳನಕಾರಿಯಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಆರೋಪಿಸಿ ನಗರದ ಅಂಬೇಡ್ಕರ್ ಸರ್ಕಲ್ನಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಘಟಕದಿಂದ ಮಾಜಿ ಶಾಸಕ ಎ.ಪಾಪಾರೆಡ್ಡಿ ಸೇರಿದಂತೆ ಬಿಜೆಪಿಯ ನಾನಾ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯಲ್ಲಿ ಮಾಜಿ ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಮುಂದಾಗಿದ್ದರು. ಆಗ ಪೊಲೀಸ್ ಕಾನ್ಸ್ಟೇಬಲ್ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಪ್ರತಿಕೃತಿಯನ್ನು ಎತ್ತಿಕೊಂಡು ಹೋಗಿದ್ರು. ಆ ವೇಳೆ ಮಾಜಿ ಶಾಸಕ ಎ. ಪಾಪಾರೆಡ್ಡಿ ಪೊಲೀಸ್ ಕಾನ್ಸ್ಟೇಬಲ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿದ್ದರು.
ಹೆಚ್ಚಿನ ಓದಿಗೆ:ರಾಯಚೂರಿನಲ್ಲಿ ಪ್ರತಿಭಟನೆ ವೇಳೆ ಮಾಜಿ ಶಾಸಕರಿಂದ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ