ರಾಯಚೂರು:ಬಿಜೆಪಿಯವರು ಜೆಡಿಎಸ್ ಪ್ರಣಾಳಿಕೆಯನ್ನು ನಕಲು ಮಾಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ತಮ್ಮ ಪ್ರಣಾಳಿಕೆಗಳು ಬಿಡುಗಡೆ ಮಾಡಿದ್ದಾರೆ. ಇಸ್ರೇಲ್ ಮಾದರಿಯ ನೀರಾವರಿ ಯೋಜನೆಯನ್ನು ಬಗ್ಗೆ ನಮ್ಮ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ. ಆದರೀಗ ಬಿಜೆಪಿಯವರು ತಮ್ಮ ಪ್ರಣಾಳಿಕೆಯಲ್ಲೂ ಈ ಯೋಜನೆಯನ್ನು ಘೋಷಣೆ ಮಾಡಿದ್ದು, ಜೆಡಿಎಸ್ ಪ್ರಣಾಳಿಕೆಯನ್ನು ಕಾಪಿ ಮಾಡಿದ್ದಾರೆ ಎಂದು ದೂರಿದರು.
ನಾವು ಬಿಸಿಲು, ಮಳೆ ಲೆಕ್ಕಿಸದೇ ಪ್ರಚಾರ ಶುರು ಮಾಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಕರ್ನಾಟಕದಲ್ಲಿ ಠಿಕಾಣಿ ಹೂಡಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರಿಗೆ ಇಂದು ಮೋದಿ ಬರುತ್ತಿದ್ದಾರೆ. ಪ್ರವಾಹ ಎದುರಾದಾಗ, ಕೋವಿಡ್ ವೇಳೆಯಲ್ಲಿ ಪ್ರಧಾನಿ ಹಾಗೂ ಡಬಲ್ ಎಂಜಿನ್ ಸರ್ಕಾರ ಕರ್ನಾಟಕಕ್ಕೆ ಬರಲಿಲ್ಲ. ಇನ್ನು ನರೇಂದ್ರ ಮೋದಿಯವರು ಪರಿವಾರದ ಬಗ್ಗೆ ಚರ್ಚೆ ಮಾಡುತ್ತಾರೆ. ಆದರೆ, ಕೊಪ್ಪಳದಲ್ಲಿ ಟಿಕೆಟ್ ನೀಡಿದ್ದು, ಯಾರಿಗೆ? ಎಂದು ಕೇಳಿದರು.
ಭ್ರಷ್ಟಾಚಾರದ ಬಗ್ಗೆ ಮೋದಿ ಮಾತನಾಡುತ್ತಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗೆ ನೈತಿಕತೆ ಇದೆಯೇ?, ಭ್ರಷ್ಟಾಚಾರದ ಬಗ್ಗೆ ಮೋದಿ ಮಾತನಾಡಿದರೆ ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತೆ ಎಂದು ಲೇವಡಿ ಮಾಡಿದರು. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಲಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳುತ್ತಾರೆ. ಪ್ರಚಾರದಲ್ಲಿ ಬಿಡುವಿಲ್ಲದೆ ಇರುವುದರಿಂದ ಅವರಿಗೆ ನೆನಪಿನ ಶಕ್ತಿ ಕಡಿಮೆ ಆಗಿರಬಹುದು. ನಾನು ಸಿಎಂ ಆಗಿದ್ದಾಗ ಎರಡು ಬಾರಿ ಸಾಲಮನ್ನಾ ಮಾಡಿರುವುದಾಗಿ ಸಿದ್ದರಾಮಯ್ಯರಿಗೆ ನೆನಪಿಸುತ್ತೇನೆ ಎಂದು ಹೆಚ್ಡಿಕೆ ಹೇಳಿದರು.