ರಾಯಚೂರು :ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆಯಲ್ಲಿ ಬರ ಪರಿಶೀಲನೆ ನಡೆಸುತ್ತಿದ್ದಾರೆ.
ಲಿಂಗಸೂಗೂರು ತಾಲೂಕಿನ ಛತ್ರ ಗ್ರಾಮಕ್ಕೆ ಆಗಮಿಸಿದ ಬಿಎಸ್‌ವೈ, ಗ್ರಾಮದಲ್ಲಿನ ಶ್ರೀ ಮಾರುತೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ನೇರವೇರಿಸಿದ್ರು. ಬಳಿಕ ರಾಮಾಜೀ ತಾಂಡಕ್ಕೆ ಭೇಟಿ ನೀಡಿ ಗ್ರಾಮದಲ್ಲಿನ ಕುಡಿಯುವ ನೀರಿನ ಕುರಿತು ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿದರು. ಕುಡಿಯುವ ನೀರಿನ ಸಮಸ್ಯೆ ಮತ್ತು ನರೇಗಾ ಯೋಜನೆಯಡಿ ಜನರಿಗೆ ಕೆಲಸ ಸೇರಿದಂತೆ ಬರ ಕಾಮಗಾರಿ ಸಮರ್ಪಕವಾಗಿ ಕಾರ್ಯನಿರ್ವಹಣೆ ಮಾಡದಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ, ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ವಿಫಲವಾಗಿದೆ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಗ್ರಾಮೀಣ ಭಾಗಕ್ಕೆ ಕುಡಿಯುವ ನೀರು ಹಾಗೂ ಉದ್ಯೋಗ ನೀಡಲು ಸರ್ಕಾರ ವಿಫಲವಾಗಿದೆ. ಛತ್ತರ ತಾಂಡದಲ್ಲಿ ಜನರಿಗೆ ಉದ್ಯೋಗ ನೀಡಿಲ್ಲ. ಇನ್ನೆರಡು ದಿನದಲ್ಲಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದರು.