ರಾಯಚೂರು: ಅಂತಾರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಕೃಷ್ಣಾನದಿ ಸೇತುವೆ ರಸ್ತೆ ಸಂಪೂರ್ಣ ಶಿಥಿಲಗೊಂಡಿದ್ದು, ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಮುಂದಿನ 45 ದಿನಗಳವರೆಗೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಉಪಅಧೀಕ್ಷಕ ಸತ್ಯನಾರಾಯಣರಾವ್ ತಿಳಿಸಿದ್ದಾರೆ. ರಾಯಚೂರು ತಾಲೂಕಿನ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಶನಿವಾರ, ಕೃಷ್ಣಾ ಸೇತುವೆ ರಸ್ತೆ ದುರಸ್ತಿ ಕಾಮಗಾರಿ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳ ಸಂಪರ್ಕ ಕಲ್ಪಿಸುವ ಶಕ್ತಿನಗರ ಬಳಿಯ ಕೃಷ್ಣಾನದಿಯ ಸೇತುವೆ ರಸ್ತೆ ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೇತುವೆ ದುರಸ್ತಿ ಕಾರ್ಯ ಕೈಗೊಂಡಿದೆ. ಜ.10ರಿಂದ 45 ದಿನಗಳವರೆಗೆ ಶಕ್ತಿನಗರದ ಕೃಷ್ಣಾ ಸೇತುವೆ ಮಾರ್ಗವಾಗಿ ಚಲಿಸುವ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ರಾಯಚೂರು-ಹೈದರಾಬಾದ್ ಎನ್‌ಎಚ್-167ರ ಮಾರ್ಗದ ಕೃಷ್ಣಾ ಸೇತುವೆ ಮಾರ್ಗವಾಗಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹೆಚ್ಚು ವಾಹನಗಳ ಸಂಚಾರದಿಂದ ಸೇತುವೆ ಮತ್ತಷ್ಟು ಹದಗೆಡುವ ಸಾಧ್ಯತೆಗಳಿವೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಹೆದ್ದಾರಿ ಪ್ರಾಧಿಕಾರದಿಂದ ಈಗಾಗಲೇ ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಕಾಮಗಾರಿ ಮುಗಿಯುವವರೆಗೆ ವಾಹನ ಸಂಚಾರವನ್ನು ಸಂಪೂರ್ಣ ತಡೆಯಲಾಗುವುದು ಎಂದು ಸ್ಪಷ್ಟಪಡಿಸಿದರು.