ರಾಯಚೂರು : ಬಿಜೆಪಿಯಲ್ಲಿ ರಾಜ್ಯ ನಾಯಕತ್ವದ ಬದಲಾವಣೆ ಪ್ರಶ್ನೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯಿಲ್ಲ. ಬರುವ ಮೂರು ವರ್ಷಗಳ ಅವಧಿಗೆ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದರು.
ಬಿಜೆಪಿಯಲ್ಲಿ ಬಣ ರಾಜಕೀಯ ಇಲ್ಲ. ಎಲ್ಲರ ಒಮ್ಮತದ ಮೇರೆಗೆ ಸರ್ಕಾರ ಉತ್ತಮವಾಗಿ ಮುನ್ನಡೆಯುತ್ತಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್ ಕುಮಾರ್ ಅವರು ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಪಕ್ಷದ ಮಾರ್ಗದರ್ಶಕರಾಗಿ, ಬಿಜೆಪಿ ನಾಯಕರಿಗೆ ಅವರು ಸಲಹೆ, ಸೂಚನೆ ನೀಡುತ್ತಾರೆ ಎಂದು ಸ್ಪಷ್ಟನೆ ಕೊಟ್ಟರು.
'ಬಿಜೆಪಿಯಲ್ಲಿ ರಾಜ್ಯ ನಾಯಕತ್ವದ ಬದಲಾವಣೆ ಪ್ರಶ್ನೆಯಿಲ್ಲ' ನೆರೆ, ಬರ ಹಾಗೂ ಕೊರೊನಾ ನಿರ್ವಹಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಅನುದಾನದ ಯಾವುದೇ ಕೊರತೆಯಿಲ್ಲ. ವಿಧಾನಸಭೆ ಉಪ ಚುನಾವಣೆಯಲ್ಲಿ ಮತದಾರರು ಬಿಜೆಪಿ ಬೆಂಬಲಿಸಿ, 12 ಸ್ಥಾನ ನೀಡಿದ್ದಾರೆ. ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಆದ್ಯತೆ ನೀಡಲಾಗಿದೆ. ತಾಲೂಕು ಮಟ್ಟದಲ್ಲಿ ಪಕ್ಷ ಸಂಘಟನೆಗೊಳಿಸಲು ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.