ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಶರಣ ಪ್ರಕಾಶ್ ಪಾಟೀಲ್ ರಾಯಚೂರು:ಮಹಿಳೆಯರು ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸುವಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಗೆ ಯಾವುದೇ ನಷ್ಟವಾಗಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ರಾಯಚೂರಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದರು.
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವೂ ಅಧಿಕಾರಕ್ಕೆ ಬಂದ್ರೆ ಜನರಿಗೆ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಭರವಸೆ ನೀಡಲಾಗಿತ್ತು. ಅದರಂತೆ ಮೊದಲನೆಯದಾಗಿ ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸುವ ಶಕ್ತಿ ಯೋಜನೆ ಜಾರಿಗೆ ತರುತ್ತಿದ್ದೇವೆ. ಮಹಿಳೆಯರು ಇದರ ಲಾಭ ಪಡೆಯಬೇಕು ಎಂದು ಹೇಳಿದ್ರು.
ಮಹಿಳೆಯರು ಬಸ್ನಲ್ಲಿ ಪ್ರಯಾಣಿಸುವಾಗ ಸಾರಿಗೆ ಸಿಬ್ಬಂದಿ ಗೌರವದಿಂದ ನಡೆದುಕೊಳ್ಳಬೇಕು. ಆ. 15ರಂದು ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನಗೊಳಿಸಲಾಗುವುದು. ನಿರುದ್ಯೋಗಿಗಳಿಗೆ ಕೌಶಲ ಅಭಿವೃದ್ಧಿ ಇಲಾಖೆಯಿಂದ 3 ಸಾವಿರ ರೂ. ನೀಡುತ್ತೇವೆ. 2 ವರ್ಷಗಳ ಕಾಲ ನಿರುದ್ಯೋಗಿ ಭತ್ಯೆ ನೀಡುತ್ತೇವೆ ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡುತ್ತೇವೆ, ರಾಯಚೂರಿಗೆ ಏಮ್ಸ್ ಸ್ಥಾಪನೆ ಮಾಡುತ್ತೇವೆ, ಸಿದ್ದರಾಮಯ್ಯ ಜತೆಗೆ ಚರ್ಚೆ ಮಾಡಿ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದರು. ಇದಕ್ಕೂ ಮುನ್ನ ರಾಯಚೂರಿನ ಏಮ್ಸ್ ಸ್ಥಾಪನೆಗಾಗಿ ನಗರದ ಜಿಲ್ಲಾ ಕ್ರೀಡಾಂಗಣದ ಬಳಿಯ ಮಹಾತ್ಮಗಾಂಧಿ ಪುತ್ಥಳಿಯ ಬಳಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಹೋರಾಟಗಾರರೊಂದಿಗೆ ಚರ್ಚೆ ಮಾಡಿದರು.
ಆಗ ಕಲಬುರಗಿ ಏಮ್ಸ್ ಸ್ಥಾಪನೆ ಮಾಡುತ್ತೇವೆ ಎಂಬ ಹೇಳಿಕೆಯನ್ನು ವಾಪಸ್ ಪಡೆದು, ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆ ಮಾಡುತ್ತೇವೆ ಎಂಬ ಹೇಳಿಕೆಗೆ ಪಟ್ಟು ಹಿಡಿದರು. ಚುನಾವಣೆಯ ಪ್ರಣಾಳಿಕೆಯಲ್ಲಿ ಹೇಳಿದಂತೆ ರಾಯಚೂರು ಏಮ್ಸ್ ಸ್ಥಾಪಿಸಬೇಕು ಎನ್ನುವುದಕ್ಕೆ ಬದ್ಧವಾಗಿರಬೇಕು ಎಂದು ಆಗ್ರಹಿಸಿದರು.
ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು:ರಾಯಚೂರು ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಸ್ಥಳೀಯವರಿಗೆ ನೀಡುವ ಬದಲು ಅನ್ಯ ಜಿಲ್ಲೆಯವರಿಗೆ ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿರುವುದನ್ನು ಖಂಡಿಸಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್‌ಗೆ ಕಪ್ಪು ಬಟ್ಟೆ ಪ್ರದರ್ಶಿಸಲು ಮುಂದಾಗಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನಗರಕ್ಕೆ ಆಗಮಿಸುತ್ತಿರುವುದನ್ನು ಅರಿತ ಹೋರಾಟಗಾರರು ಕಪ್ಪು ಬಟ್ಟೆ ತೋರುವುದಕ್ಕೆ ಪ್ಲಾನ್ ಮಾಡಿದ್ದರು. ಈ ಹಿನ್ನಲೆ ಸಚಿವರು ನಗರಕ್ಕೆ ಆಗಮಿಸುವ ಮುನ್ನ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕೆಲವರು ದಿಕ್ಕು ಪಾಲಾಗಿ ಓಡಿ ಹೋದರು.ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಗೋ ಬ್ಯಾಕ್ ಹಾಗೂ ಬಾಯ್ಕಾಟ್ ಚಳವಳಿ ಮಾಡುವ ಪ್ರತಿಭಟನೆಯನ್ನು ನಾಗರಿಕ ಹಿರಿಯ ವೇದಿಕೆ ಹಮ್ಮಿಕೊಂಡಿತ್ತು.
ಏಮ್ಸ್ ಸ್ಥಾಪನೆಗೆ ಒತ್ತಾಯಿಸಿ ಪ್ರತಿಭಟನೆ..ಇನ್ನು ರಾಯಚೂರು ಜಿಲ್ಲೆಗೆ ಏಮ್ಸ್ ಸ್ಥಾಪನೆ ಮಾಡಬೇಕೆಂದು ನೂರಾರು ದಿನಗಳಿಂದ ನಾಗರಿಕ ಹಿರಿಯ ವೇದಿಕೆ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದ್ದು, ಆದರೆ ಇತ್ತೀಚೆಗೆ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕಲಬುರಗಿ ಜಿಲ್ಲೆಯ ಏಮ್ಸ್ ಸ್ಥಾಪನೆ ಮಾಡುವುದಾಗಿ ಹೇಳಿಕೆ ನೀಡಿದ್ದರು. ಇದಕ್ಕೆ ಜಿಲ್ಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತು. ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬೇರೆಯವರಿಗೆ ನೀಡಿರುವುದನ್ನು ವಿರೋಧಿಸಿ ಜಿಲ್ಲಾ ಉಸ್ತುವಾರಿ ಸ್ಥಾನ ಸ್ಥಳೀಯರಿಗೆ ಹಾಗೂ ಏಮ್ಸ್ ನ್ನು ರಾಯಚೂರಿನಲ್ಲಿ ಸ್ಥಾಪಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.
ಇದನ್ನೂಓದಿ:Monsoon-Enters Karnataka: ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ: ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್