ರಾಯಚೂರು: ಕೃಷ್ಣಾ ಹಾಗೂ ಭೀಮಾ ನದಿಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಪ್ರಾರಂಭಿಸಲಾಗಿರುವ ಕಾಳಜಿ ಕೇಂದ್ರಗಳಲ್ಲಿ ಸ್ವಚ್ಛತೆ ಹಾಗೂ ಉತ್ತಮ ಆರೋಗ್ಯ ಸೇವೆ ಲಭ್ಯವಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್. ವಿಶಾಲ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ಮತ್ತು ಕೋವಿಡ್ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೃಷ್ಣಾ ಹಾಗೂ ಭೀಮಾ ನದಿಯ ಪ್ರವಾಹದಿಂದ ತಾಲೂಕಿನ 17 ಗ್ರಾಮಗಳು ಪೀಡಿತವಾಗಿದ್ದು, ಕೆಲ ಗ್ರಾಮಗಳನ್ನು ಸ್ಥಳಾಂತರಿಸಿ ಜಿಲ್ಲಾಡಳಿತ ಪರಿಹಾರ ಕೇಂದ್ರಗಳನ್ನು ಪ್ರಾಂಭಿಸಿದೆ. ಈ ಕೇಂದ್ರಗಳಲ್ಲಿ ಸ್ವಚ್ಛತೆ ಹಾಗೂ ಉತ್ತಮ ಆರೋಗ್ಯ ಸೇವೆ ದೊರೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಮಳೆ ಹಾಗೂ ಪ್ರವಾಹದಿಂದ ಬೆಳೆ ಹಾನಿ, ಮನೆ, ರಸ್ತೆ ಇತರೆ ಹಾನಿಗಳ ಕುರಿತು ಸರ್ವೇ ನಡೆಸಿ ವರದಿ ನೀಡಬೇಕು ಎಂದರು.