ರಾಯಚೂರು:ಸೋಮವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವಾರು ವರ್ಷಗಳ ಬೇಡಿಕೆಯಾಗಿದ್ದ ರಾಯಚೂರು ವಿವಿ ಸ್ಪಾಪನೆಗೆ ಅನುಮೋದನೆ ನೀಡಲಾಗಿದೆ.
ವಿದ್ಯಾರ್ಥಿಗಳಿಂದ ಸಂಭ್ರಮಾಚರಣೆ ಇದೂವರೆಗೂ ಗುಲ್ಬರ್ಗ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಯಚೂರು ಸ್ನಾತಕೋತ್ತರ ಕೇಂದ್ರವನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಯಚೂರು ವಿಶ್ವವಿದ್ಯಾಲಯವನ್ನಾಗಿ ವಿಧೇಯಕದ ಮೂಲಕ ಜಾರಿಗೆ ತರಲು ಉದ್ದೇಶಿಸಲಾಗಿದೆ.
ಈ ಮೂಲಕ ರಾಯಚೂರಿನಲ್ಲಿ 2019-20ನೇ ಸಾಲಿನಿಂದ ಪ್ರತ್ಯೇಕ ರಾಯಚೂರು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ ಬರಲಿದ್ದು, ಈ ವರ್ಷದಿಂದ ನವ ವಿಶ್ವವಿದ್ಯಾಲಯದಲ್ಲಿ ಶೈಕ್ಷಣಿಕ ಚಟುವಟಿಕೆಗಳು ಆರಂಭಗೊಳ್ಳಲಿವೆ.
ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯ ಸುಮಾರು 200 ಕಾಲೇಜುಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡಲಿವೆ. ಪ್ರತ್ಯೇಕ ವಿಶ್ವವಿದ್ಯಾಲಯದ ರಚನೆಗಾಗಿ ಈಗಾಗಲೇ ವಿಶೇಷಾಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.
ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಜಿಲ್ಲೆಯ ಶಾಸಕರು ಹಾಗೂ ಸಾರ್ವಜನಿಕರು ರಾಯಚೂರು ವಿವಿ ಸ್ಪಾಪನೆಗೆ ಬೇಡಿಕೆ ಇಟ್ಟಿದ್ದರು. ಆಗ ಸಿದ್ದರಾಮಯ್ಯ ಮಂಜೂರು ಮಾಡಿ ನಂತರ ಇದು ರಾಜ್ಯಪಾಲರ ಅಂಗಳದಲ್ಲಿತ್ತು. ಇದೀಗ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದಲ್ಲಿ ಬೇಡಿಕೆ ಸಾಕಾರವಾಗುತ್ತಿರುವುದಕ್ಕೆ ಜಿಲ್ಲೆಯ ಜನರು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನು ಈ ವಿಷಯ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಯರಗೇರಾ ಸ್ನಾತಕೋತ್ತರ ಕೇಂದ್ರದ ಅಲ್ಪಸಂಖ್ಯಾತರ ವಸತಿ ನಿಲಯ, ಹಿಂದುಳಿದ ವರ್ಗಗಳ ವಸತಿ ನಿಲಯದ ಹಾಸ್ಟೆಲ್ ವಿದ್ಯಾರ್ಥಿಗಳು ಸಂಭ್ರಮಾಚರಣೆ ಮಾಡಿದರು.