ರಾಯಚೂರು: ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಪಟ್ಟಣದ ತಾಲೂಕು ಕಚೇರಿಯ ವಾಲ್ಮೀಕಿ ಭವನದಲ್ಲಿ ಚುನಾವಣೆ ಅಧಿಕಾರಿಗಳಿಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ನಿನ್ನೆಯಿಂದ ಆರಂಭವಾಗಿದ್ದು, ಎರಡನೇ ದಿನವಾದ ಇಂದು ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಪ್ರತಾಪ್ ಗೌಡ ಪಾಟೀಲ್ ಪ್ರತಿಕ್ರಿಯೆ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಮೊದಲನೇ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಎರಡನೇ ದಿನವಾದ ಇಂದು ಬಿಜೆಪಿಯಿಂದ ಬೈ ಎಲೆಕ್ಷನ್ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಘೋಷಣೆ ಮಾಡಿಲ್ಲ. ಆದ್ರೆ ಸಂಭಾವ್ಯ ಅಭ್ಯರ್ಥಿಯಾಗಿರುವ ಪ್ರತಾಪ್ ಗೌಡ ಪಾಟೀಲ ತಮ್ಮ ಬೆಂಬಲಿಗರು, ಹಿತೈಷಿಗಳೊಂದಿಗೆ ಚುನಾವಣೆ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಮಸ್ಕಿ ಚುನಾವಣೆ; ಮೊದಲ ದಿನ ಯಾವುದೇ ನಾಮಪತ್ರ ಸಲ್ಲಿಕೆ ಇಲ್ಲ
ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಗೌಡ ಪಾಟೀಲ, ಬೈ ಎಲೆಕ್ಷನ್ ಗೆಲುವು ನನ್ನದೆ. ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ಮಾ. 29ರಂದು ಸಚಿವ ಶ್ರೀರಾಮುಲು, ಮುಖಂಡ ಬಿ.ವೈ. ವಿಜಯೇಂದ್ರ, ಶಾಸಕರಾದ ರಾಜುಗೌಡ, ಡಾ. ಶಿವರಾಜ ಪಾಟೀಲ ಸೇರಿದಂತೆ ಅನೇಕ ಮುಖಂಡರು, ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ರು.