ರಾಯಚೂರು: ಸ್ಲಂ ಬೋರ್ಡ್(ಕೊಳಚೆ ಅಭಿವೃದ್ಧಿ ಮಂಡಳಿ)ನ್ನು ವಸತಿ ಇಲಾಖೆಯಲ್ಲಿ ವಿಲೀನಗೊಳಿಸಲು ಚಿಂತನೆ ನಡೆದಿದೆ ಎಂದು ವಸತಿ ಇಲಾಖೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಸತಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಸತಿ ಇಲಾಖೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆಯಿದೆ. ಹೀಗಾಗಿ ಸ್ಲಂ ಬೋರ್ಡ್ನ್ನು ಸಮಾಪನೆ ಮಾಡಿ ವಸತಿ ಇಲಾಖೆಯಲ್ಲಿ ವಿಲೀನಗೊಳಿಸಲು ಚಿಂತನೆ ನಡೆದಿದೆ ಎಂದರು.
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣ ಸರ್ಕಾರದ ನಾನಾ ವಸತಿ ಯೋಜನೆಯಡಿ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮನೆಗಳ ನಿರ್ಮಾಣ ಬಾಕಿಯಿದೆ. ಇದರಲ್ಲಿ 5.40 ಮನೆಗಳನ್ನು ನಿರ್ಮಿಸುವ ಕಾರ್ಯ ನಡೆಯುತ್ತಿದ್ದು. 1.15 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಇನ್ನುಳಿದ ಮನೆಗಳನ್ನು ಬರುವ ಎರಡು ವರ್ಷದಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸುವುದಾಗಿ ಹೇಳಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಆದೇಶಿಸಿರುವುದಕ್ಕೆ ನಾನು ಸ್ವಾಗತಿಸುತ್ತೇನೆ. ಇದರಿಂದ ಈ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಜೀವನ ಸಾಗಿಸಲು ಸಹಕಾರಿಯಾಗಲಿದೆ ಎಂದರು.
ಇನ್ನೂ ಇದಕ್ಕೂ ಮುನ್ನ ವಸತಿ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಇಲಾಖೆಯಿಂದ ನಡೆಯುತ್ತಿರುವ ಕಾಮಗಾರಿ ಪೂರ್ಣಗೊಳಿಸುವ ಮೂಲಕ ಬಡವರಿಗೆ ಹಂಚಿಕೆ ಮಾಡಬೇಕಾದ ಮನೆಗಳನ್ನು ನಿರ್ಮಿಸುವಂತೆ ಸೂಚಿಸಿದರು. ಆಶ್ರಯ ಮನೆಗಳು, ಪುನರ್ವಸತಿ ಕೇಂದ್ರಗಳ ಬಳಿ ಮನೆಗಳ ನಿರ್ಮಾಣ, ರಾಜೀವ್ ಗಾಂಧಿ ವಸತಿ ಯೋಜನೆ, ತಾಂತ್ರಿಕ ಸಮಸ್ಯೆ ನಿರ್ವಹಿಸುವ ಮೂಲಕ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.