ರಾಮನಗರ : ಜಿಲ್ಲೆಯಲ್ಲಿ ಎರಡು ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಮಾಗಡಿ ತಾಲೂಕಿನಲ್ಲಿ ಒಬ್ಬರು ನಿಧನರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಮೊದಲ ಬಾರಿಗೆ ಮಾಗಡಿಯಲ್ಲಿ ಕಂಡು ಬಂದಿದ್ದು, 40 ವರ್ಷದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೇ ಇಂದು ಮೃತಪಟ್ಟಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 150 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಕನಕಪುರ 55, ಮಾಗಡಿ 39, ಚನ್ನಪಟ್ಟಣ 30 ಮತ್ತು ರಾಮನಗರದಲ್ಲಿ 26 ಪ್ರಕರಣಗಳು ಕಂಡು ಬಂದಿದೆ. ಇಂದು 23 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಒಟ್ಟು 44 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಮನಗರದ ಕೋವಿಡ್ ಆಸ್ಪತ್ರೆ ಸೇರಿದಂತೆ ಬೆಂಗಳೂರು ಆಸ್ಪತ್ರೆಯಲ್ಲಿ ಕನಕಪುರದ 49 ಮಂದಿ, ಮಾಗಡಿ 25, ಚನ್ನಪಟ್ಟಣ 11 ಹಾಗೂ ರಾಮನಗರದ 16 ಮಂದಿ ಸೇರಿ ಒಟ್ಟು 101 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ 65 ಜನರು ಇಂದು ಹೋಮ್ ಕ್ವಾರಂಟೈನ್ ಅವಧಿ ಮುಕ್ತಾಯವಾಗಿದೆ. ಒಟ್ಟಾರೆಯಾಗಿ 2,380 ಜನರು ಹೋಮ್ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ. 3 ಜನರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗಾದಲ್ಲಿ ಇರಿಸಲಾಗಿದೆ ಎಂದರು.
ಇಂದು ಹೊಸದಾಗಿ 89 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 8,829 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 1,352 ಮಂದಿಯ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.