ರಾಮನಗರ: ನೂತನ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ನಿತ್ಯ ಅಪಘಾತಗಳು ನಡೆಯುತ್ತಿರುವುದರಿಂದ ಅದು ಮೃತ್ಯು ಕೂಪವಾಗಿ ಪರಿಣಮಿಸಿದೆ. ಬೆಂಗಳೂರು ಮೈಸೂರು ತೆರಳುವವರಿಗೆ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ದಶಪಥ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಆದರೆ ಎರಡು ಪ್ರಮುಖ ನಗರಗಳನ್ನು ಬೆಸೆಯುವ ಎಕ್ಸ್ಪ್ರೆಸ್ ಹೈವೇ ಇದೀಗ ಮೃತ್ಯು ಕೂಪವಾಗಿ ಪರಿಣಮಿಸುತ್ತಿದೆ.
ಮೃತ್ಯುಕೂಪವಾದ ಹೆದ್ದಾರಿ:ನೂತನ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಅತಿ ವೇಗದಿಂದ ನಿತ್ಯ ಒಂದಲ್ಲ ಒಂದು ಕಡೆ ಅಪಘಾತಗಳು ಸಂಭವಿಸಿ, ಸಾವು ನೋವುಗಳು ಉಂಟಾಗುತ್ತಿವೆ. ಹೀಗಾಗಿ ಇದು ಅಪಾಯಕಾರಿ ಹೆದ್ದಾರಿಯಾಗಿ ಮಾರ್ಪಟ್ಟಿದೆ. ಬಹು ಕೋಟಿ ವೆಚ್ಚದಲ್ಲಿ ದಶಪಥ ಹೆದ್ದಾರಿ ನಿರ್ಮಾಣಗೊಂಡಿದೆ. ಹೆದ್ದಾರಿ ಉದ್ಘಾಟನೆಗೂ ಮೊದಲೇ ಮೃತ್ಯುಕೂಪವಾಗಿ ಪರಿಣಮಿಸಿದ್ದು, ದಿನದಿಂದ ದಿನಕ್ಕೆ ಅಪಘಾತಗಳ ಹಾಗೂ ಮೃತಪಡುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಶೇ.80 ರಷ್ಟು ಕಾಮಗಾರಿ ಪೂರ್ಣ: ಬೆಂಗಳೂರಿನಿಂದ ಮೈಸೂರುವರೆಗೂ ಸುಮಾರು 130 ಕಿಲೋಮೀಟರ್ ದೂರದ ಹೆದ್ದಾರಿ ಕಾಮಗಾರಿ 80ರಷ್ಟು ಮುಗಿದಿದೆ. ಸುಂದರವಾದ ರಸ್ತೆಯಲ್ಲಿ ವಾಹನದ ವೇಗದ ಮಿತಿಗೆ ಇದುವರೆಗೂ ಕಡಿವಾಣ ಬಿದ್ದಿಲ್ಲ. ಹೀಗಾಗಿ ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿದ್ದು, ಇದು ಆತಂಕಕ್ಕೆ ಕಾರಣವಾಗಿದೆ.
ಹೆದ್ದಾರಿಯಲ್ಲಿ ಸಾವಿನ ಸಂಖ್ಯೆ ಹೆಚ್ಚಳ: ಜಿಲ್ಲೆಯಲ್ಲಿ ಈ ವರ್ಷ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿರುವ ಅಪಘಾತಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಅಂಕಿ - ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಈ ವರ್ಷ 1,262 ಅಪಘಾತ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 302 ಜನರು ಮೃತಪಟ್ಟಿದ್ದಾರೆ. 1,272 ಮಂದಿ ಗಾಯಗೊಂಡಿದ್ದಾರೆ.