ರಾಮನಗರ:ತಾಲೂಕಿನ ಬಿಡದಿಯಲ್ಲಿ ವ್ಯಕ್ತಿಯೊಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ. ಬಿಡದಿ ಬಸ್ ನಿಲ್ದಾಣದ ಹಿಂಭಾಗದಲ್ಲಿ ತರಕಾರಿ ವ್ಯಾಪಾರಸ್ಥರಾಗಿದ್ದ ವ್ಯಕ್ತಿಗೆ (45 ವರ್ಷ) ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು.
ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಹೋಗಿ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಅವರು ರಾಜರಾಜೇಶ್ವರಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಅವರನ್ನು ಬೋರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ನೀಡುವ ವೇಳೆ ವ್ಯಕ್ತಿ ಸಾವನ್ನಪ್ಪಿದ್ದು, ಗಂಟಲುದ್ರವ ಪರೀಕ್ಷೆ ಮಾಡಲಾಗಿ ಪಾಸಿಟಿವ್ ಕಾಣಿಸಿಕೊಂಡಿದೆ.
ರಾಮನಗರದಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ ಮೃತ ವ್ಯಕ್ತಿ ಬಿಡದಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಇದೀಗ ಮೃತ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನು ಪತ್ತೆ ಹಚ್ಚಲು ಜಿಲ್ಲಾಡಳಿತ ಕ್ರಮ ಕೈ ಗೊಂಡಿದೆ.
ಇನ್ನು ಇಂದು ಜಿಲ್ಲೆಯಲ್ಲಿ 2 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ರಾಮನಗರದ ಟಿಪ್ಪು ನಗರದಲ್ಲಿ ವಾಸವಿದ್ದ 28 ವರ್ಷದ ಮಗ ಹಾಗೂ 48 ವರ್ಷದ ತಾಯಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಯುವಕ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಅಲ್ಲಿಂದಲೇ ಸೋಂಕು ಹರಡಿದೆ ಎಂಬ ಶಂಕೆ ವ್ಯಕ್ತವಾಗಿದೆ. ಇಬ್ಬರಿಗೂ ರಾಮನಗರ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 22 ಕ್ಕೆ ಏರಿಕೆಯಾಗಿದೆ.