ರಾಮನಗರ: ಜಿಲ್ಲೆಯಲ್ಲಿ ಮನೆಯಿಲ್ಲದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರಿಗೆ ಸೂರು ಒದಗಿಸಲು ಅರ್ಹ ಫಲಾನುಭವಿಗಳನ್ನು ಗ್ರಾಮ ಮಟ್ಟದಲ್ಲಿ ಗುರುತಿಸಿ ಪಟ್ಟಿ ಮಾಡುವಂತೆ ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್. ಕೆ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಕಲ್ಪಿಸುವ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅರೆ ಅಲೆಮಾರಿ ಹಾಗೂ ಅಲೆಮಾರಿ ಜನಾಂಗದವರಿಗೆ ಮನೆ ಒದಗಿಸಲು ಗುರಿ ನಿಗದಿಯಾಗಿಲ್ಲ. ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕೇಂದ್ರ ಕಚೇರಿಗೆ ಗುರಿ ನಿಗದಿ ಪಡಿಸಿಕೊಡುವಂತೆ ಪ್ರಸ್ತಾವನೆ ಸಲ್ಲಿಸಿ. ನಿವೇಶನ ಹಾಗೂ ಮನೆ ಇಲ್ಲದ ಫಲಾನುಭವಿಗಳ ಪಟ್ಟಿಯನ್ನು ಸಹ ಸಿದ್ಧಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಅಲೆಮಾರಿ ಅಥವಾ ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಒಬ್ಬರು ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಒಬ್ಬರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ಆಯ್ಕೆ ಮಾಡಬೇಕಿರುತ್ತದೆ. ಈ ಜನಾಂಗಕ್ಕೆ ಸೇರಿದ ಜಿಲ್ಲಾ ಪಂಚಾಯತ್ ಸದಸ್ಯರು ಇರುವುದಿಲ್ಲ. ಒಬ್ಬರು ಸಂಘ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಆಯ್ಕೆ ಮಾಡಬೇಕಿರುತ್ತದೆ. ಸರ್ಕಾರ ವಿಧಿಸಿರುವ ಷರತ್ತುಗಳೊಂದಿಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಅರ್ಹ ಸದಸ್ಯರನ್ನು ಆಯ್ಕೆ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.