ರಾಮನಗರ :ನಾಡಪ್ರಭು ಕೆಂಪೇಗೌಡರ ವೀರಸಮಾಧಿ ಇರುವ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮವನ್ನು ಒಂದು ವರ್ಷದೊಳಗೆ ಸಮಗ್ರ ಅಭಿವೃದ್ಧಿಪಡಿಸಿ ಮುಂದಿನ ವರ್ಷದ ಜಯಂತಿಯನ್ನು ಇಲ್ಲಿಯೇ ಆಚರಿಸಲಾಗುವುದು ಎಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ನಿಮಿತ್ತ ಡಿಸಿಎಂ ತಾಲೂಕಿನ ಕೆಂಪಾಪುರ ಗ್ರಾಮದಲ್ಲಿರುವ ನಾಡಪ್ರಭುಗಳ ವೀರಸಮಾಧಿಗೆ ಪೂಜೆ ಸಲ್ಲಿಸಿ ಬಳಿಕ ಮಾತನಾಡಿದರು. ಸಮಸ್ತ ಕನ್ನಡಿಗರ ಪಾಲಿಗೆ ಕೆಂಪಾಪುರವೂ ಒಂದು ಶ್ರದ್ಧಾಕೇಂದ್ರ. ಹೀಗಾಗಿ, ಸಮಾಧಿ ಸ್ಥಳ, ಕೆಂಪಾಪುರ ಕೆರೆಯನ್ನು ಅಭಿವೃದ್ಧಿ ಮಾಡಲಾಗುವುದು. ನಾಡಿನ ಮತ್ತು ದೇಶದ ಸಮಸ್ತ ಜನರು ಇಲ್ಲಿಗೆ ಭೇಟಿ ನೀಡುವಂತೆ ಆಗಬೇಕು. ಕೆಂಪೇಗೌಡರ ಕಾಲದ ವೈಭವವನ್ನು ಮರುಸೃಷ್ಠಿ ಮಾಡಿ ಇಡೀ ಗ್ರಾಮವನ್ನು ಐತಿಹಾಸಿಕವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.