ರಾಮನಗರ : ಹಾಲು ಉತ್ಪಾದಕರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆಯುತ್ತಿದ್ದ ಚುನಾವಣೆ ಹಿನ್ನೆಲೆ ಗ್ರಾಮಕ್ಕೆ ತೆರಳುತ್ತಿದ್ದ ಚುನಾವಣಾಧಿಕಾರಿಗಳ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಬ್ಯಾಲೆಟ್ ಪೇಪರ್, ಲ್ಯಾಪ್ಟಾಪ್ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯ ಗ್ರಾಮದಲ್ಲಿ ಇಂದು ನಡೆದಿದೆ. ಚುನಾವಣಾಧಿಕಾರಿ ಉಮೇಶ್ ಹಾಗೂ ಉಷಾ ಎಂಬುವರಿಗೆ ಮಾರಕಾಸ್ತ್ರದಿಂದ ಬೆದರಿಸಿ ಲ್ಯಾಪ್ ಟಾಪ್ ಹಾಗೂ ಬ್ಯಾಲೆಟ್ ಪೇಪರ್ ಕಳವು ಮಾಡಲಾಗಿದೆ.
ಹುಲ್ಲೇನಹಳ್ಳಿ ಹಾಲು ಉತ್ಪಾದಕರ ಸಂಘದ ನಿರ್ದೇಶಕ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿತ್ತು. ಈ ಸಂಬಂಧ ಚುನಾವಣಾ ಅಧಿಕಾರಿ ಉಮೇಶ್ ಹಾಗೂ ಉಷಾ ಸೇರಿ ಒಟ್ಟು ಐವರು ಇಲ್ಲಿನ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಕೆಂಚನಹಳ್ಳಿ ಬಳಿ ಅಧಿಕಾರಿಗಳ ಬೊಲೆರೋ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ದರೋಡೆ ಮಾಡಿ ಪರಾರಿಯಾಗಿದ್ದಾರೆ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರು ಈ ಕೃತ್ಯ ಎಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ದುಷ್ಕರ್ಮಿಗಳನ್ನು ತಡೆಯಲು ಯತ್ನಿಸಿದ ಚುನಾವಣಾಧಿಕಾರಿಗೆ ಕಾರಿನಿಂದ ಡಿಕ್ಕಿ ಹೊಡೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮಾಗಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.