ರಾಮನಗರ: ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯ. ಭಾರತೀಯರಾಗಿ ನಮ್ಮ ದೇಶಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಆಕೆ ಉದ್ದೇಶಪೂರ್ವಕವಾಗಿ ಹೀಗೆ ಮಾಡಿದ್ದಾಳೋ ಅಥವಾ ಪ್ರಚಾರಕ್ಕಾಗಿ ಮಾಡಿದ್ದಾಳೋ? ಆಕೆಗೆ ತಿಳಿವಳಿಕೆ ಇದೆಯೋ ಇಲ್ಲವೋ, ಗೊತ್ತಿಲ್ಲ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ರಾಮನಗರದ ಹೊರವಲಯದಲ್ಲಿ ನಿಖಿಲ್ ವಿವಾಹ ಪ್ರದೇಶಕ್ಕೆ ಪೂಜೆ ಸಲ್ಲಿಕೆ ವೇಳೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದ ಕಾರ್ಯಕರ್ತರಾದ ಇಮ್ರಾನ್ ಸಹ ಕಾರ್ಯಕ್ರಮದ ಸಂಘಟನೆಯ ಹೊಣೆ ಹೊತ್ತಿದ್ದರು. ಘೋಷಣೆ ಕೂಗಿದ ಕೂಡಲೇ ಆಕೆಯ ಮೈಕ್ ಕಸಿದುಕೊಂಡಿದ್ದಾರೆ. ಹೀಗಾಗಿ ಸಂಘಟಕರಿಂದ ಆ ರೀತಿಯ ಉದ್ದೇಶಪೂರ್ವಕವಾಗಿ ಪ್ರಯತ್ನ ಆಗಿಲ್ಲ ಎಂಬುದು ಸ್ಪಷ್ಟವಾಗಿದೆ. ಮೊದಲು ನಾನು ಭಾರತೀಯ ಎಂಬ ಭಾವನೆ ಇದ್ದಾಗ ಮಾತ್ರ ಹೋರಾಟಕ್ಕೆ ಇತರರು ಕೈಜೋಡಿಸುತ್ತಾರೆ. ಈ ರೀತಿಯ ಅಪಪ್ರಚಾರ ಯಾರಿಗೂ ಬೇಡ.