ರಾಮನಗರ: ಕನಕಪುರ ತಾಲೂಕಿನ ಸಾತನೂರಿನ ಬಳಿ ನಡೆದ ಇದ್ರೀಷ್ ಪಾಷಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರೆ ನಾಲ್ಕು ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಕುರಿತು ರಾಮನಗರ ಜಿಲ್ಲೆಯ ಕನಕಪುರ ಜೆ ಎಂ ಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದುತ್ವ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತು ನಾಲ್ವರು ಸಹಚರರನ್ನು ಭಾನುವಾರ ರಾಜಸ್ಥಾನದಿಂದ ರಾಮನಗರಕ್ಕೆ ಕರೆತರಲಾಯಿತು. ಬಳಿಕ, ಪೊಲೀಸರು ಆರೋಪಿಗಳನ್ನು ಕನಕಪುರ ಜೆ ಎಂ ಎಫ್ ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನಂತರ, ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು. ಈ ಪ್ರಕರಣದ ಬಗ್ಗೆ ಇನ್ನಷ್ಟು ವಿಚಾರಣೆ ಮಾಡಬೇಕಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡಬೇಕೆಂದು ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡಿದರು. ಈ ಹಿನ್ನೆಲೆ ಪೊಲೀಸರ ಮನವಿ ಪುರಸ್ಕರಿಸಿದ ಕೋರ್ಟ್, ಆರೋಪಿಗಳನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಏನಿದು ಪ್ರಕರಣ?:ಮಾರ್ಚ್ 31 ರಂದು ಸಾತನೂರು ಬಳಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನು ಪುನೀತ್ ಕೆರೆಹಳ್ಳಿ ಮತ್ತು ಅವರ ಟೀಂ ರಕ್ಷಣೆ ಮಾಡಿತ್ತು. ಆದರೆ, ಕ್ಯಾಂಟರ್ ವಾಹನದಲ್ಲಿದ್ದ ಪಾಷಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಜಾನುವಾರುಗಳನ್ನು ರಕ್ಷಿಸಿದ ಅನತಿ ದೂರದಲ್ಲಿಯೇ ಇದ್ರೀಷ್ ಮೃತದೇಹ ಪತ್ತೆಯಾಗಿತ್ತು. ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಂಡದಿಂದ ದಾಳಿ ನಡೆಸಲಾಗಿದೆ ಎಂದು ಮೃತನ ಕುಟುಂಬಸ್ಥರು ಆರೋಪಿಸಿ ಸಾತನೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು.