ರಾಮನಗರ: ಕೋವಿಡ್ ತೀವ್ರವಾಗಿ ಹಬ್ಬಿದ ಸಂದರ್ಭದಲ್ಲಿ ಸೋಂಕಿತರಿಗೆ ಹಾಗೂ ಇತರೆ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲವೆಂದು ಸಾರ್ವಜನಿಕರಿಂದ ದೂರು ಬಂದಿದ್ದು ನಮಗೆಲ್ಲರಿಗೂ ತಿಳಿದಿರುವ ವಿಚಾರವೇ ಸರಿ. ಆದರೆ ಇಲ್ಲೊಂದು ಸರ್ಕಾರಿ ಆಸ್ಪತ್ರೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ ಎನ್ನುವಂತೆ ಸ್ವಚ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ರೋಗಿಗಳಿಗೆ ಉತ್ತಮ ಚಿಕಿತ್ಸೆ ಕೊಡುತ್ತಿದೆ. ಸುತ್ತಮುತ್ತಲ ಗ್ರಾಮಸ್ಥರು ಈ ಆಸ್ಪತ್ರೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೌದು, ಇದು ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಗಡಿ ಗ್ರಾಮವಾದ ಇಗ್ಗಲೂರಿನಲ್ಲಿರುವ ಸರ್ಕಾರಿ ಆಸ್ಪತ್ರೆ. ಯಾವುದೇ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲವೆಂಬಂತೆ ಕಾರ್ಯ ನಿರ್ವಹಿಸುತ್ತಿದೆ. ಖಾಸಗಿ ಆಸ್ಪತ್ರೆಯನ್ನೇ ಮೀರಿಸುವ ರೀತಿಯಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲಾಗಿದೆ. ಈ ಆಸ್ಪತ್ರೆಯಲ್ಲಿ ಮುಖ್ಯವೈದ್ಯರೊಬ್ಬರ ಜೊತೆ 9 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ 13 ಆಶಾ ಕಾರ್ಯಕರ್ತೆಯರು, ಲ್ಯಾಬ್ ಟೆಕ್ನಿಷಿಯನ್, ಫಾರ್ಮಾಸಿಸ್ಟ್ ಸಹ ಈ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಬೆಳಗ್ಗೆ 9:30 ರಿಂದ ಸಂಜೆ 4:30ರವರೆಗೆ ಆಸ್ಪತ್ರೆಯ ಬಾಗಿಲು ತೆರೆದಿರುತ್ತದೆ. 24 ಗಂಟೆಗಳ ಕಾಲ ಆ್ಯಂಬುಲೆನ್ಸ್ ಸೇವೆ ಲಭ್ಯವಿರಲಿದೆ. ಈ ಆಸ್ಪತ್ರೆಗೆ ಇಗ್ಗಲೂರು ಸೇರಿದಂತೆ ಸುತ್ತಮುತ್ತಲ ಹತ್ತಕ್ಕೂ ಹೆಚ್ಚು ಗ್ರಾಮಗಳ ಜನರು ಚಿಕಿತ್ಸೆಗೆಂದು ಬರುತ್ತಾರೆ. ಜೊತೆಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಲ ಗ್ರಾಮಗಳ ಜನರು ಸಹ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಆಗಮಿಸುತ್ತಾರೆ. ಈ ಕೇಂದ್ರದಲ್ಲಿ ಪ್ರತ್ಯೇಕವಾಗಿ ಕೋವಿಡ್ ಪರೀಕ್ಷೆ ಕೂಡ ಮಾಡಲಾಗುತ್ತಿದೆ.