ರಾಮನಗರ: ರಾಮನಗರ ಜಿಲ್ಲೆಯಲ್ಲಿಯೂ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ರೈತರನ್ನು ಆತಂಕಕ್ಕೆ ದೂಡಿದೆ. ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣ ಹಾಗೂ ಮುನ್ನೆಚ್ಚರಿಕೆಯ ಸಲುವಾಗಿ ಜಿಲ್ಲಾಡಳಿತ ಒಂದು ತಿಂಗಳ ಕಾಲ ಜಾತ್ರೆ, ದನಗಳ ಸಂತೆ ಮತ್ತು ಜಾನುವಾರುಗಳ ಸಾಗಣೆ ನಿಷೇಧ ಮಾಡಿದೆ.
ತಮಿಳುನಾಡಿನ ಗಡಿಗಳಿಗೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಚರ್ಮ ಗಂಟುರೋಗ ಕಾಣಿಸಿಕೊಂಡಿದೆ. ಅದರಲ್ಲೂ ಕನಕಪುರ ತಾಲೂಕಿನಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡು ಬಂದಿವೆ. ಗಡಿಗ್ರಾಮದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಿರುವ ಕಾರಣ ಚರ್ಮಗಂಟು ರೋಗ ಹೆಚ್ಚಾಗಿ ಬಾಧಿಸುತ್ತಿದೆ.
ಕನಕಪುರದ ಜತೆಗೆ, ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನಲ್ಲಿ ಪ್ರಕರಣಗಳು ಕಂಡುಬಂದಿವೆ. ಆದರೆ, ಮಾಗಡಿ ತಾಲೂಕಿನಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ರಾಮನಗರ ತಾಲೂಕಿನಲ್ಲಿ ಗೋಶಾಲೆಯಲ್ಲಿಯೂ ಕಾಯಿಲೆ ಕಾಣಿಸಿಕೊಂಡಿತ್ತು. ಪ್ರಸ್ತುತ ಕಡಿಮೆಯಾಗಿದೆ. ಒಟ್ಟಾರೆ ಜಿಲ್ಲೆಯ ಮೂರು ತಾಲೂಕಿನಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದೆ.