ರಾಮನಗರ:ರಾಜೀವ್ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ರಾಮನಗರದ ಕ್ಯಾಂಪಸ್ ನಿರ್ಮಾಣ ಕಾಮಗಾರಿಗೆ ತ್ವರಿತವಾಗಿ ಚಾಲನೆ ನೀಡಲಾಗುವುದು ಎಂದು ಉಪ ಮಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜೀವ್ ಗಾಂಧಿ ವಿವಿ ಸ್ಥಳಾಂತರಕ್ಕೆ ಸಂಬಂಧಿಸಿ ಕಾನೂನಾತ್ಮಕ ತೊಡಕಿದೆ. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನಲ್ಲಿ ವಿವಾದ ಅರ್ಜಿಯೊಂದು ಇತ್ಯರ್ಥವಾಗಬೇಕಿದೆ. ಕೋವಿಡ್ ಕಾರಣಕ್ಕೆ ನ್ಯಾಯಾಲಯದ ಕಲಾಪ ನಡೆಯದೇ ಅದರ ವಿಲೇವಾರಿ ವಿಳಂಬವಾಗಿದೆ. ಈ ಅರ್ಜಿ ಇತ್ಯರ್ಥವಾದ ತಕ್ಷಣವೇ ಕಾಮಗಾರಿ ಆರಂಭಿಸಿ ಕಾಲಮಿತಿಯೊಳಗೆ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ವಿವಿ ಸ್ಥಳಾಂತರದ ಜೊತೆಯಲ್ಲಿಯೇ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಹೆಲ್ತ್ ಸಿಟಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು. ಈ ಎರಡು ಯೋಜನೆಗಳು ಸಾಕಾರಗೊಂಡ ಮೇಲೆ ರಾಮನಗರದ ಚಿತ್ರಣವೇ ಬದಲಾಗಲಿದೆ ಎಂದು ಡಿಸಿಎಂ ವಿಶ್ವಾಸ ವ್ಯಕ್ತಪಡಿಸಿದರು.
ಕೋವಿಡ್ ನಿಯಂತ್ರಣಕ್ಕೆ ಕ್ರಮ:
ಹಸಿರು ವಲಯವಾಗಿದ್ದ ಜಿಲ್ಲೆಯಲ್ಲಿ ಈಗ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ ಡಿಸಿಎಂ, ಆಸ್ಪತ್ರೆಗಳಲ್ಲಿ ಕಠಿಣ ಎಚ್ಚರಿಕೆ ವಹಿಸಬೇಕು. ಜಿಲ್ಲಾಸ್ಪತ್ರೆಯಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು. ದಯಾನಂದ ಸಾಗರ್ ಆಸ್ಪತ್ರೆಯವರು ಜಿಲ್ಲೆಗೆ 200 ಬೆಡ್ಗಳನ್ನು ನೀಡುವ ಭರವಸೆ ನೀಡಿದ್ದಾರೆ.
ನಾನೇ ಖುದ್ದಾಗಿ ಆ ಆಸ್ಪತ್ರೆಯ ಆಡಳಿತ ಮಂಡಳಿಯವರ ಜತೆ ಮಾತಾನಾಡಿದ್ದೇನೆ. ಕೂಡಲೇ ಅವರನ್ನು ಸಂಪರ್ಕಿಸಿ ಬೆಡ್ಗಳನ್ನು ಪಡೆದುಕೊಳ್ಳುವಂತೆ ಡಿಸಿಎಂ ಅವರು ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.
ಕೋವಿಡ್ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಂದೂ ದೂರು ಬರಬಾರದು. ಔಷಧಿ, ಪಲ್ಸ್ ಮೀಟರ್ ಸೇರಿ ಸಪ್ಲೈ ಚೈನಿನಲ್ಲಿ ಯಾವುದೇ ವ್ಯತ್ಯಯವಾಗಬಾರದು ಎಂದರು.
ಬೆಳೆ ವಿಮೆ ವಿಳಂಬ ಡಿಸಿಎಂ ಗರಂ:
ರೈತರಿಗೆ ಬೆಳೆ ವಿಮೆ ನೀಡುವಲ್ಲಿ ವಿಳಂಬ ಮಾಡುತ್ತಿರುವ ಕಾರ್ಪೊರೇಷನ್ ಬ್ಯಾಂಕ್ ಬಗ್ಗೆ ಉಪ ಮುಖ್ಯಮಂತ್ರಿ ಗರಂ ಆದ ಪ್ರಸಂಗ ಕೆಡಿಪಿ ಸಭೆಯಲ್ಲಿ ನಡೆಯಿತು. ಮೂರು ವರ್ಷವಾದರೂ ಬ್ಯಾಂಕಿನಿಂದ ವಿಮೆ ಮೊತ್ತ ಬಂದಿಲ್ಲ. ರೈತರು ಬ್ಯಾಂಕ್ ಮತ್ತು ಕಂದಾಯ ಇಲಾಖೆ ಕಚೇರಿಗಳಿಗೆ ಅಲೆಯುವಂತಾಗಿದೆ ಎಂದು ಡಿಸಿಎಂ ಗಮನ ಸೆಳೆದರು.