ರಾಮನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತ ಮಕ್ಕಳ ಸಂಬಂಧಿಕರ ಆಕ್ರಂದನ ರಾಮನಗರ : ತಾಲೂಕಿನ ಲಕ್ಷ್ಮೀಪುರ ಗ್ರಾಮದ ಬಳಿ ಟ್ಯೂಶನ್ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿರುವ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಅಲ್ಲದೇ, ಘಟನೆ ವೇಳೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರು ಮಕ್ಕಳನ್ನ ರಾಮನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆದರೆ, ಚಿಕಿತ್ಸೆ ಫಲಿಸದೇ ರೋಹಿತ್ (5), ಶಾಲಿನಿ (8) ಮೃತಪಟ್ಟಿದ್ದು, ಉಳಿದ ಸುಚಿತ್, ಗೌತಮಿ, ಲೇಖನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಆಸ್ಪತ್ರೆಗೆ ಎಎಸ್ಪಿ ಸುರೇಶ್ ಭೇಟಿ ನೀಡಿ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ಮಕ್ಕಳಿಗೆ ಗುದ್ದಿ ಎಸ್ಕೇಪ್ ಆಗಿದ್ದ ಗೂಡ್ಸ್ ವಾಹನ ಚಾಲಕ ತನ್ನ ವಾಹನವನ್ನ ಬೇರೆಡೆ ನಿಲ್ಲಿಸಿ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಪ್ರತ್ಯೇಕ ಘಟನೆ- ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ದೇವಲಾಪುರದ ಬಳಿ ನಡೆದಿದೆ.
ನೆಮ್ಮನಹಳ್ಳಿ ಗ್ರಾಮದ ದೇವೇಶ ಹಾಗೂ ಪ್ರಕಾಶ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದು, ಶೃತಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಶೃತಿಯನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸರಗೂರು ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲಬುರಗಿಯಲ್ಲಿ ಸಾರಿಗೆ ಬಸ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಧಾರುಣ ಘಟನೆ ಚಿತ್ತಾಪುರ ತಾಲೂಕಿನ ಸಾತನೂರ ಬಳಿ ನಡೆದಿದೆ. ಮೃತ ಬೈಕ್ ಸವಾರರು ದಿಗ್ಗಾಂವ ಗ್ರಾಮದ ಮರೆಪ್ಪ (54) ಹಾಗೂ ಭಾಗಣ್ಣಾ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಇಬ್ಬರು ದುರ್ಮರಣ ಹೊಂದಿದ್ದಾರೆ.
ಸ್ಥಳಕ್ಕೆ ಸಿಪಿಐ ಪ್ರಕಾಶ್ ಯಾತನೂರ, ಚಿತ್ತಾಪುರ ಪಿಎಸ್ಐ ಶ್ರೀಶೈಲ ಅಂಬಾಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಶಿವಯ್ಯಾ, ಮುಕ್ತುಂ ಪಟೇಲ್, ಹುಸೇನ್ ಪಾಷಾ, ಬಸು ರೆಡ್ಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್‌ಗೆ ಕಾರು ಡಿಕ್ಕಿ- ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿ ಕಾರ್ ಸಮೇತ ಪರಾರಿಯಾದ ಚಾಲಕ: ಓವರ್‌ಟೇಕ್ ಮಾಡಲು ಹೋಗಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದನು. ಅಪಘಾತ ಮಾಡಿದ ಕಾರು ಚಾಲಕ ಬೈಕ್ ಸವಾರನನ್ನು ತನ್ನ ಕಾರಿನಲ್ಲಿ ಕರೆತಂದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಕಾರು ಸಮೇತ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಕಲಬುರಗಿಯಲ್ಲಿ ಸಾರಿಗೆ ಬಸ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರರಿಬ್ಬರ ದುರ್ಮರಣ