ಶಿವಮೊಗ್ಗ:ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ 2022ರ ಪ್ರತಿಷ್ಠಿತ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್ (ಎನ್‌ಐಆರ್‌ಎಫ್) ಬಿಡುಗಡೆಗೊಳಿಸಿದ್ರು. ಇದರಲ್ಲಿ ಕುವೆಂಪು ವಿಶ್ವವಿದ್ಯಾಲಯವು 86ನೇ ರ್ಯಾಂಕ್ಗಳಿಸುವ ಮೂಲಕ ಸತತ ಐದನೇ ವರ್ಷ ದೇಶದ ಟಾಪ್ 100ರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.
ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು ಭಾಗವಹಿಸಿದ್ದ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. 42.44 ಅಂಕಗಳನ್ನು ಪಡೆಯುವ ಮೂಲಕ ಇಡೀ ದೇಶದ ವಿಶ್ವವಿದ್ಯಾಲಯಗಳ ಪೈಕಿ 86ನೇ ಸ್ಥಾನ ಪಡೆದಿದೆ. 2017ರಲ್ಲಿ 150 ರಿಂದ 200ರ ವರ್ಗದಲ್ಲಿ ಸ್ಥಾನ ಪಡೆದಿದ್ದ ವಿಶ್ವವಿದ್ಯಾಲಯ, 2018ರಲ್ಲಿ ಭಾರಿ ಜಿಗಿತ ಕಂಡಿದ್ದು, 78ನೇ ಸ್ಥಾನಕ್ಕೇರಿತ್ತು. ಪ್ರಸಕ್ತ ಸಾಲಿನಲ್ಲಿ 86ನೇ ರ‍್ಯಾಂಕ್ ಪಡೆದಿದೆ.
ಕೇಂದ್ರೀಯ ವಿಶ್ವವಿದ್ಯಾಲಯಗಳು, ಕೇಂದ್ರ ಸರ್ಕಾರದ ಉನ್ನತ ಶೈಕ್ಷಣಿಕ ಸಂಸ್ಥೆಗಳು, ಇಂಜಿನಿಯರಿಂಗ್ ನಂತಹ ವೃತ್ತಿಪರ ಕೋರ್ಸ್ಗಳನ್ನು ನಡೆಸುವ ಖಾಸಗಿ ವಿಶ್ವವಿದ್ಯಾಲಯಗಳು, ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿದಂತೆ ದೇಶಾದ್ಯಂತ (4,100) ಶಿಕ್ಷಣ ಸಂಸ್ಥೆಗಳು ಶ್ರೇಣೀಕರಣಕ್ಕೆ ಒಳಪಟ್ಟಿವೆ. ಕರ್ನಾಟಕದ ವಿಶ್ವವಿದ್ಯಾಲಯಗಳ ಪೈಕಿ ಮೈಸೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಕ್ರಮವಾಗಿ 33 ಮತ್ತು 64ನೇ ರ‍್ಯಾಂಕ್ ಪಡೆಯುವುದರೊಂದಿಗೆ ರಾಜ್ಯಮಟ್ಟದಲ್ಲಿ ಮೊದಲೆರಡು ಸ್ಥಾನ ಪಡೆದಿವೆ.
ಇದನ್ನೂ ಓದಿ:2021ರ NIRF ರ್ಯಾಂಕಿಂಗ್ನಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ 81ನೇ ಸ್ಥಾನ
ದೇಶದ ಶೈಕ್ಷಣಿಕ ಸಂಸ್ಥೆಗಳ ಗುಣಮಟ್ಟವನ್ನು ಉತ್ತಮಪಡಿಸಲು ಮತ್ತು ಒಟ್ಟಾರೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 2015ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎನ್‌ಐಆರ್‌ಎಫ್ ರ‍್ಯಾಂಕಿಂಗ್ ಪ್ರಾರಂಭಿಸಿದೆ. ಈಗ ಏಳನೇ ಆವೃತ್ತಿಯನ್ನು ಬಿಡುಗಡೆಗೊಳಿಸಿದೆ.
ವಿಶ್ವವಿದ್ಯಾಲಯದ ರ‍್ಯಾಂಕಿಂಗ್ ಬಗ್ಗೆ ಪ್ರತಿಕ್ರಿಯಿಸಿರುವ ಕುಲಪತಿ ಪ್ರೊ. ಬಿ.ಪಿ ವೀರಭದ್ರಪ್ಪ, ಎನ್‌ಐಆರ್‌ಎಫ್ ಮೌಲ್ಯಮಾಪನದ ಅವಧಿಯಲ್ಲಿ ಕೋವಿಡ್-19 ನಂತಹ ಮಹಾಮಾರಿ ಶೈಕ್ಷಣಿಕ ಸಂಸ್ಥೆಗಳನ್ನು ಕಳೆಗುಂದಿಸಿತ್ತು. ಜೊತೆಗೆ ವಿವಿಯ ಕಲಾ, ವಿಜ್ಞಾನ ವಿಭಾಗಗಳಲ್ಲಿ ಸುಮಾರು 10 ಮಂದಿ ಹಿರಿಯ ಪ್ರಾಧ್ಯಾಪಕರು ಸೇವೆಯಿಂದ ನಿವೃತ್ತರಾಗಿದ್ದು, ಅವರ ಸಂಶೋಧನಾ ಉತ್ಪಾದಕತೆ ಮತ್ತು ಕೊಡುಗೆಗಳು ರ‍್ಯಾಂಕಿಂಗ್ ನಿರ್ಣಯದಲ್ಲಿ ಪರಿಗಣನೆಯಾಗಿಲ್ಲ. ಆದಾಗ್ಯೂ ವಿವಿಯು ಅಗ್ರ 100 ಸಂಸ್ಥೆಗಳ ಪಟ್ಟಿಯಲ್ಲಿ ಸ್ಥಾನಪಡೆದಿದ್ದು ಸಂತಸ ತಂದಿದೆ ಎಂದು ತಿಳಿಸಿದರು.
ರಾಜ್ಯದ ಉನ್ನತ ಶಿಕ್ಷಣದ ಶೈಕ್ಷಣಿಕ ಸಂಸ್ಥೆಗಳು:ಕುವೆಂಪು ವಿಶ್ವವಿದ್ಯಾಲಯ 10ನೇ ಸ್ಥಾನ ಪಡೆದಿದೆ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ (1), ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (7), ಮೈಸೂರು ವಿಶ್ವವಿದ್ಯಾಲಯ (33), ಮೈಸೂರಿನ ಜೆ.ಎಸ್.ಎಸ್. ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಅಂಡ್ ರಿಸರ್ಚ್ (34), ಬೆಂಗಳೂರು ವಿಶ್ವವಿದ್ಯಾಲಯ (64), ಬೆಂಗಳೂರಿನ ಕ್ರೆಸ್ಟ್ ವಿವಿ (71), ಮಂಗಳೂರಿನ ನಿಟ್ಟೆ ತಾಂತ್ರಿಕ ವಿಶ್ವವಿದ್ಯಾಲಯ (75) ಸ್ಥಾನ ಪಡೆದಿವೆ.
ಇನ್ನುಳಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (72), ಮತ್ತು ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯ (79), ಕೆಎಲ್‌ಯ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಅಂಡ್ ರಿಸರ್ಚ್ (88), ಮಂಗಳೂರಿನ ಯೆನಪೊಯ ವಿವಿ(97) ಇವು ಟಾಪ್ 100ರಲ್ಲಿರುವ ಕರ್ನಾಟಕದ ಇತರ ಶೈಕ್ಷಣಿಕ ಸಂಸ್ಥೆಗಳು.