ಶಿವಮೊಗ್ಗ:ಜಿಲ್ಲೆಯ ಗೊಂದಿ ಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 60ಕ್ಕೂ ಹಚ್ಚು ಮಕ್ಕಳು ಸೋಮವಾರ ಮಧ್ಯಾಹ್ನದ ಊಟದ ನಂತರ ಅಸ್ವಸ್ಥರಾಗಿದ್ದಾರೆ. ನಗರದ ಮೆಗ್ಗಾನ್ ಆಸ್ಪತ್ರೆಗೆ ಮಕ್ಕಳನ್ನು ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಚಿಕಿತ್ಸೆ ನೀಡುತ್ತಿದ್ದಾರೆ.
ಸುಮಾರು 300 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ನಿನ್ನೆ ಮಧ್ಯಾಹ್ನದ ಊಟದ ನಂತರ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೆಲವರಲ್ಲಿ ವಾಂತಿ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಸಿಇಒ, ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.
ಯಾವುದೇ ಭಯ ಪಡುವ ಅಗತ್ಯ ಇಲ್ಲ ಎಂದ ಸಿಮ್ಸ್ ನಿರ್ದೇಶಕ ವಿರೂಪಾಕ್ಷಪ್ಪ:ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಮ್ಸ್ ನಿರ್ದೇಶಕ ವಿರೂಪಾಕ್ಷಪ್ಪ, ಮೊರಾರ್ಜಿ ಶಾಲೆಯ ಮಕ್ಕಳು ಮಧ್ಯಾಹ್ನ ಚಪಾತಿ, ಪಲ್ಯ, ಅನ್ನ ಸಾಂಬಾರು ಸೇವಿಸಿದ್ದರು. ಅದಾದ ಬಳಿಕ ಒಬ್ಬಬ್ಬರಾಗಿ ಅಸ್ವಸ್ಥರಾಗಿದ್ದಾರೆ. ಕೆಲವರಿಗೆ ಹೊಟ್ಟೆ ನೋವು, ಇನ್ನೂ ಕೆಲವರಿಗೆ ವಾಂತಿ ಆಗಿದೆ. ಮತ್ತೆ ಕೆಲವರು ತಲೆತಿರುಗಿ ಬಿದ್ದಿದ್ದಾರೆ. ಇನ್ನು ಕೆಲ ಮಕ್ಕಳು ಹೆದರಿ ಆಸ್ಪತ್ರೆಗೆ ಬಂದಿದ್ದಾರೆ. ಆದ್ರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಎಲ್ಲಾ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಅಸ್ವಸ್ಥ ಮಕ್ಕಳ ಆರೋಗ್ಯ ವಿಚಾರಿಸಿದ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ: ಇನ್ನೂ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ, ಮೊರಾರ್ಜಿ ಶಾಲೆಯ 80ರಷ್ಟು ಮಕ್ಕಳು ಅಸ್ವಸ್ಥರಾಗಿದ್ದಾರೆ. 65 ಮಕ್ಕಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ 15 ಮಕ್ಕಳಿಗೆ ಶಾಲೆಯಲ್ಲಿ ಉಪಚರಿಸಲಾಗುತ್ತಿದೆ. ಶಾಲೆಯ 80ರಷ್ಟು ಮಕ್ಕಳು ಅಸ್ವಸ್ಥರಾಗಿದ್ದಾರೆ. ಮೇಲ್ನೋಟಕ್ಕೆ ನೀರಿನಿಂದ ತೊಂದರೆ ಆಗಿರುವ ಸಾಧ್ಯತೆ ಇದೆ. ಮಧ್ಯಾಹ್ನದ ಆಹಾರ, ನೀರು ಮತ್ತು ವಾಂತಿಯ ಸ್ಯಾಂಪಲ್ ಪಡೆದಿದ್ದಾರೆ. ಎಲ್ಲಾ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದರು.