ಶಿವಮೊಗ್ಗ:ಅಸಮರ್ಪಕ ವಾಹನಗಳ ನಿಲುಗಡೆಯಿಂದಾಗಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಈ ಹಿನ್ನೆಲೆ ವಾಹನ ನಿಲುಗಡೆಗೆ ಪರ್ಯಾಯ ಸ್ಥಳ ಗುರುತಿಸಿ ಆದೇಶ ಹೊರಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಈ ಕುರಿತು ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದಾರೆ.
ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದ ಪ್ರವಾಸಿ ಮಂದಿರದ ಸಮೀಪದಲ್ಲಿ ವಾಹನ ಸಂಚಾರ ಹೆಚ್ಚಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ್ದು, ವಾಹನಗಳ ವೇಗ ನಿಯಂತ್ರಣಕ್ಕಾಗಿ ಹಾಗೂ ಸಂಭವಿಸಬಹುದಾದ ಅಪಘಾತಗಳನ್ನು ತಡೆಯಲು ಕೂಡಲೇ ವೈಜ್ಞಾನಿಕವಾಗಿ ಹಂಪ್ಸ್ಗಳನ್ನು ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಹಲವೆಡೆಗಳಲ್ಲಿ ನಗರಸಂಚಾರಿ ಬಸ್ಸುಗಳ ನಿಲುಗಡೆಗೆ ಸ್ಥಳ ನಿಗದಿಪಡಿಸಲಾಗಿದೆ. ಆದರೆ, ಖಾಸಗಿ ಬಸ್ಸುಗಳ ಚಾಲಕರು ರಸ್ತೆಯ ನಡುವೆ ಹಾಗೂ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿದ್ದಾರೆ. ಅದಕ್ಕಾಗಿ ಬಸ್ಸುಗಳ ನಿಲುಗಡೆಯ ಸ್ಥಳದಲ್ಲಿ ನಾಮಫಲಕ ಅಳವಡಿಸುವಂತೆ ಸೂಚಿಸಿದ ಅವರು, ನಿಯಮ ಉಲ್ಲಂಘಿಸಿ ಎಲ್ಲೆಂದರಲ್ಲಿ ಬಸ್ಸುಗಳನ್ನು ನಿಲ್ಲಿಸುವ ವಾಹನಗಳ ಹಾಗೂ ಚಾಲಕರ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಂದಿನ 15ದಿನಗಳೊಳಗಾಗಿ ಆಟೋ ಸ್ಟ್ಯಾಂಡ್ ಹಾಗೂ ಬಸ್ ನಿಲ್ದಾಣವನ್ನು ಆರಂಭಿಸಲಾಗುವುದು. ಅದರ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿಯನ್ನು ಪಾಲಿಕೆ ಹಾಗೂ ಪೊಲೀಸ್ ಇಲಾಖೆಗಳಿಗೆ ವಹಿಸಲಾಗುವುದು ಎಂದು ತಿಳಿಸಿದರು.
ನಂತರ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎ. ಶಾಂತರಾಜು, ನಗರದ ಓ.ಟಿ. ರಸ್ತೆಯಲ್ಲಿನ ಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸಂಚಾರಕ್ಕೆ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು. ಅಲ್ಲದೇ ಆಲ್ಕೊಳ ಸರ್ಕಲ್‍ನಲ್ಲಿ ಬಸ್ ನಿಲುಗಡೆಗೆ ಸೂಕ್ತ ಸ್ಥಳ ನಿಗದಿಪಡಿಸಬೇಕು ಎಂದು ಸೂಚಿಸಿದರು.